ಬೆಂಗಳೂರು: ಉಡುಪಿ ಜಿಲ್ಲೆ ಕಟಪಾಡಿಯ ಖಾಸಗಿ ಕಾಲೇಜೊಂದರ ಆವರಣದಲ್ಲಿ ರಾಜಕೀಯ ಭಾಷಣ ಮಾಡಿದ ಆರೋಪದ ಮೇಲೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಕಳೆದ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಕಾಲೇಜು ಅವವರಣದಲ್ಲಿ ರಾಜಕೀಯ ಭಾಷಣ ಮಾಡಿದ ಆರೋಪದ ಮೇಲೆ ಚುನಾವಣಾ ಸಂಚಾರ ಜಾಗೃತ ದಳ ಅಧಿಕಾರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದಾಖಲಿಸಿದ ಖಾಸಗಿ ದೂರನ್ನು ರದ್ದುಪಡಿಸುವಂತೆ ಕೋರಿ ಕೋಟ ಶ್ರೀನಿವಾಸ ಪೂಜಾರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಅವರ ಪರ ಹಿರಿಯ ವಕೀಲ ಎಂ. ಅರುಣ್ ಶ್ಯಾಮ್ ವಾದ ಮಂಡಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಸಂಚಾರ ಜಾಗೃತ ದಳ ಅಧಿಕಾರಿ ಅರ್ಜಿದಾರರ ವಿರುದ್ಧ ಸರ್ಕಾರಿ ಅಧಿಕಾರಿಯ ಆದೇಶ ಉಲ್ಲಂಘಿಸಿದ ಆರೋಪದ ಅಡಿಯಲ್ಲಿ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ದಾಖಲಿಸಿದ್ದಾರೆ. ಈ ದೂರು ದಾಖಲಿಸುವ ಅಧಿಕಾರ ವ್ಯಾಪ್ತಿಯನ್ನು ಜಾಗೃತ ದಳದ ಅಧಿಕಾರಿ ಹೊಂದಿಲ್ಲ. ಹೀಗಾಗಿ ಖಾಸಗಿ ದೂರನ್ನು ರದ್ದುಪಡಿಸಬೇಕು ಎಂದು ಮನವಿ ಮಾಡಿದ್ದು, ಈ ಅಂಶ ಪರಿಗಣಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಪ್ರಕರಣವನ್ನು ರದ್ದುಗೊಳಿಸಿ ಆದೇಶಿಸಿದೆ.