ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಡಿಸೆಂಬರ್ 1 ರಿಂದ ಆರಂಭವಾಗಲಿದ್ದು, ಜಿಲ್ಲೆಯ ರೈತರು ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕೋರಿದ್ದಾರೆ.
ಕೇಂದ್ರ ಸರ್ಕಾರದ ಆದೇಶದಂತೆ 2024-25 ನೇ ಸಾಲಿಗೆ ರೈತರಿಂದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಮಾಡಲಾಗುತ್ತಿದ್ದು, ಡಿಸೆಂಬರ್- 1 ರಿಂದ ಆರಂಭವಾಗಲಿದ್ದು, ಈ ಅವಕಾಶವನ್ನು ರೇತರು ಬಳಸಿಕೊಳ್ಳುವಂತೆ ಮನವಿ ಮಾಡಿದರು.
ಜಿಲ್ಲೆಗೆ ಭತ್ತ ಮತ್ತು ರಾಗಿ ಖರೀದಿಸಲು ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ ಯನ್ನು ಖರೀದಿ ಏಜೆನ್ಸಿ ಯನ್ನಾಗಿ ಸರಕಾರ ನೇಮಕ ಮಾಡಿದ್ದು ಖರೀದಿ ಪ್ರಕ್ರಿಯೆಯು ಇವರ ಮುಖಾಂತರ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಕೇಂದ್ರ ಸರ್ಕಾರದ ಬೆಂಬಲ ಬೆಲೆಯಡಿ ಡಿಸೆಂಬರ್ 1 ರಿಂದ ರೈತರ ನೋಂದಣಿ ಕಾರ್ಯ ಆರಂಭವಾಗಿದ್ದು, ಕೆಲವೇ ದಿನಗಳಲ್ಲಿ ಭತ್ತ/ ರಾಗಿ ಖರೀದಿ ಪ್ರಕ್ರಿಯೆ ನಡೆಯಲಿದೆ. ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್ ಗೆ 2300 ರೂ. ನಿಗದಿಪಡಿಸಲಾಗಿದ್ದು, ರಾಗಿ ಪ್ರತಿ ಕ್ವಿಂಟಲ್ ಗೆ 4290 ರೂ ನಿಗದಿಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಮಾಹಿತಿ ನೀಡಿದರು.
ಜಿಲ್ಲೆಯಾದ್ಯಂತ ರೈತರಿಗೆ ಅನುಕೂಲ ಆಗುವಂತೆ 05 ಕಡೆಗಳಲ್ಲಿ ಮಡಿಕೇರಿ ಎಪಿಎಂಸಿ ಆವರಣ, ಕುಶಾಲನಗರ ಎಪಿಎಂಸಿ ಆವರಣ, ಗೋಣಿಕೊಪ್ಪ ಎಪಿಎಂಸಿ ಆವರಣ ಹಾಗೂ ಸೋಮವಾರಪೇಟೆ ಎಪಿಎಂಸಿ ಮಾರ್ಕೇಟ್ ಆವರಣದಲ್ಲಿ ಹಾಗೂ ವಿರಾಜಪೇಟೆ ಪಟ್ಟಣದಲ್ಲಿ ಖರೀದಿ ಮಾಡಲಾಗುತ್ತಿದೆ. ರೈತರು ಸಂಬಂಧಪಟ್ಟ ನೋಂದಣಿ ಕೇಂದ್ರಗಳಲ್ಲಿಯೇ ತಮ್ಮ ಭತ್ತವನ್ನು ನೀಡಬಹುದಾಗಿದೆ. ಬೇಡಿಕೆ ಇದ್ದಲ್ಲಿ ಅಗ್ಯತ್ಯಕ್ಕೆ ತಕ್ಕಂತೆ ಹೆಚ್ಚಿನ ಕೇಂದ್ರ ತೆರೆಯಲು ಸಹ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸೂಕ್ತ ದಾಸ್ತಾನಿಗಾಗಿ ಭತ್ತ ಖರೀದಿ ಕೇಂದ್ರಗಳಲ್ಲಿ ಭತ್ತದ ಗುಣಮಟ್ಟವನ್ನು ಪರೀಕ್ಷಿಸಲು ಗ್ರೇಡರ್ಗಳನ್ನು ನಿಯೋಜಿಸಲು ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಸೂಚಿಸಿದರು.ರೈತರ ನೋಂದಣಿ ತಾಂತ್ರಿಕ ತೊಂದರೆಗಳು ಕಂಡು ಬಂದಲ್ಲಿ ಕೂಡಲೆ ಸರಿಪಡಿಸಲು ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಭತ್ತದ ಖರೀದಿ ನೋಂದಣಿ ಕುರಿತು ಗ್ರಾಮೀಣ ಭಾಗದಲ್ಲಿ ರೈತರಿಗೆ ಹಾಗೂ ರೈತ ಮುಖಂಡರಿಗೆ ಹಾಗೂ ರೈತ ಸಂಪರ್ಕ ಕೇಂದ್ರಗಳ ಮೂಲಕ ಹೆಚ್ಚಿನ ಮಾಹಿತಿ ನೀಡುವಂತೆ ಹಾಗೂ ರೈತರ ನೋಂದಣಿ ಕೇಂದ್ರಗಳು ಹಾಗೂ ಭತ್ತ ಖರೀದಿ ಕೇಂದ್ರಗಳ ಕುರಿತು ವಿವರಗಳನ್ನು ನೀಡುವಂತೆ ಖರೀದಿ ಏಜೆನ್ಸಿಯವರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದರು.
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರಾದ ಕುಮುದಾ ಶರತ್ ಅವರು ಮಾತನಾಡಿ ಭತ್ತವನ್ನು ಮಾರಾಟ ಮಾಡಬೇಕಾದ ರೈತರು ಈಗಾಗಲೇ ಪ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಯಾಗಿರಬೇಕು. ಒಂದು ವೇಳೆ ರೈತರು ನೋಂದಣಿ ಮಾಡದಿದ್ದಲ್ಲಿ ಪ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಂಡು ತಾವು ಬೆಳದ ಭತ್ತವನ್ನು ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಬಹುದಾಗಿದೆ ಎಂದರು.
ಖರೀದಿ ಕೇಂದ್ರಗಳಲ್ಲಿ ರೈತರಿಂದ ಖರೀದಿ ಮಾಡಿದ ಭತ್ತದ ಮೊತ್ತವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ. ನೋಂದಣಿ ಕೇಂದ್ರದಲ್ಲಿ ರೈತರು ಪ್ರೂಟ್ ಐಡಿ, ಆಧಾರ್ ಸಂಖ್ಯೆಗೆ ಜೋಡಣೆಯಾದ ತಮ್ಮ ಎನ್ಪಿಸಿಐ ಬ್ಯಾಂಕ್ ಖಾತೆಯ ವಿವರ ನೀಡಬೇಕಿದೆ ಎಂದು ಅವರು ತಿಳಿಸಿದರು.
ಸರಕಾರವು ಪೌಷ್ಟಿಕಾಂಶವುಳ್ಳ ಸಾರವರ್ದಿತ ಅಕ್ಕಿಯನ್ನು ಫಲಾನುಭವಿಗಳಿಗೆ ನೀಡಲು ಉದ್ದೇಶಿಸಿದ್ದು, ಈ ಸಂಬಂಧ ಅಕ್ಕಿ ಗಿರಣಿಗಳಲ್ಲಿ ಹಲ್ಲಿಂಗ್ ಮಾಡುವಾಗ ಸಾರವರ್ದಿತ ಅಕ್ಕಿಯನ್ನು ತಯಾರು ಮಾಡಲು ಕಡ್ಡಾಯವಾಗಿ ಅಕ್ಕಿ ಗಿರಣಿ ಮಾಲೀಕರುಗಳು ಬ್ಲೆಂಡಿಂಗ್ ಮಿಷನ್ನ್ನು ಅಳವಡಿಸಲು ಹಾಗೂ ಅಳವಡಿಸದ ಅಕ್ಕಿಗಿರಣಿಗಳಿಗೆ ಸರಕಾರದ ಆದೇಶದಂತೆ ಹಲ್ಲಿಂಗ್ಗೆ ಭತ್ತವನ್ನು ನೀಡಲು ಸಾದ್ಯವಿರುವುದಿಲ್ಲ ಎಂದು ಸಭೆಯಲ್ಲಿ ಆಹಾರ ಇಲಾಖೆಯ ಜಂಟಿ ನಿರ್ದೇಶಕರು ಮಾಹಿತಿ ನೀಡಿದರು.ನೋಂದಣಿ ಕೇಂದ್ರದಲ್ಲಿ ಸಿಬ್ಬಂದಿ ಮತ್ತು ಡೇಟಾ ಎಂಟ್ರಿ ಆಪರೇಟರ್ಗಳ ನೇಮಕ, ಕಂಪ್ಯೂಟರ್, ಇಂಟರ್ನೆಟ್ ಸೌಲಭ್ಯ, ವಿದ್ಯುತ್ ಸಂಪರ್ಕ, ಕುಡಿಯುವ ನೀರಿನ ವ್ಯವಸ್ಥೆ ಮತ್ತಿತರ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವಂತೆ ಆಹಾರ ಇಲಾಖೆಯ ಜಂಟಿ ನಿರ್ದೇಶಕರು ಸಲಹೆ ಮಾಡಿದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಚಂದ್ರಶೇಖರ್, ತೂಕ ಮತ್ತು ಅಳತೆ ವಿಭಾಗದ ಸಹಾಯಕ ನಿಯಂತ್ರಕರಾದ ಸರಳಾ ನಾಯರ್, ಕರ್ನಾಟಕ ಕೃಷಿ ಮಾರಾಟ ಮಂಡಳಿಯ ವ್ಯವಸ್ಥಾಪಕರಾದ ಸೋಮಯ್ಯ, ಕರ್ನಾಟಕ ಕೃಷಿ ಉತ್ಪನ್ನ ಮಾರಾಟ ಸಮಿತಿಯ ಫರ್ನಾಂಡೀಸ್, ಉಗ್ರಾಣ ನಿಗಮದ ವ್ಯವಸ್ಥಾಪಕರಾದ ನಾಗ ನಾಯಕ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಯಶೋಧ, ಆಹಾರ ಇಲಾಖೆ ನಿರೀಕ್ಷಕರಾದ ಸ್ವಾತಿ, ನಿಶಾನ್, ವೀಣಾ, ಯಶಸ್ವಿನಿ, ಕಿರಣ್, ನಾಗೇಂದ್ರ ಇತರರು ಇದ್ದರು.