ರಾಂಚಿ: ಜೆಎಂಎಂ ನಾಯಕ ಹೇಮಂತ್ ಸೊರೆನ್ ಅವರು ನವೆಂಬರ್ 26 ರಂದು ನಾಲ್ಕನೇ ಬಾರಿಗೆ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ I.N.D.I.A ಬ್ಲಾಕ್‌ನ ಹಲವಾರು ವಿರೋಧ ಪಕ್ಷದ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ.
ಕಾಂಗ್ರೆಸ್ ನಾಯಕ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಟಿಎಂಸಿ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ಸಿಪಿಐ(ಎಂಎಲ್) ನಾಯಕ ದೀಪಂಕರ್ ಭಟ್ಟಾಚಾರ್ಯ ಸೇರಿದಂತೆ ಪ್ರಮುಖ ನಾಯಕರು ಇತರರು ಪಾಲ್ಗೊಳ್ಳುವ ಸಾಧ್ಯತೆಯಿದೆ.
ಹೊಸ ಸರ್ಕಾರದ ರಚನೆಯನ್ನು ಅಂತಿಮಗೊಳಿಸಲು ಸೋರೆನ್ ಕಾಂಗ್ರೆಸ್ ಹಿರಿಯ ನಾಯಕರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ. ಕ್ಯಾಬಿನೆಟ್‌ನಲ್ಲಿ ಸಿಎಂ ಹೊರತುಪಡಿಸಿ ಜಾರ್ಖಂಡ್ ಮುಕ್ತಿ ಮೋರ್ಚಾ(ಜೆಎಂಎಂ) ಕೋಟಾದ ಆರು ಸಚಿವರು, ಕಾಂಗ್ರೆಸ್‌ನ ನಾಲ್ವರು ಮತ್ತು ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ) ಒಬ್ಬರನ್ನು ಸೇರಿಸಲಿದ್ದಾರೆ.
81 ಸದಸ್ಯ ಬಲದ ವಿಧಾನಸಭೆಯಲ್ಲಿ 56 ಸ್ಥಾನಗಳನ್ನು ಗೆಲ್ಲುವ ಮೂಲಕ JMM ನೇತೃತ್ವದ ಒಕ್ಕೂಟವು ಶನಿವಾರ ಜಾರ್ಖಂಡ್‌ನಲ್ಲಿ ಸತತ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದಿದೆ.
ಜೆಎಂಎಂ 34 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದರೆ, ಮೈತ್ರಿಕೂಟದ ಪಾಲುದಾರರಾದ ಕಾಂಗ್ರೆಸ್ ಮತ್ತು ಆರ್‌ಜೆಡಿ ಕ್ರಮವಾಗಿ 16 ಮತ್ತು ನಾಲ್ಕು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಸಿಪಿಐ(ಎಂಎಲ್) ಲಿಬರೇಷನ್ ಎರಡು ಸ್ಥಾನಗಳನ್ನು ಪಡೆದುಕೊಂಡಿದೆ. ಎನ್‌ಡಿಎ ಕೇವಲ 24 ಸ್ಥಾನಗಳಿಗೆ ತೃಪ್ತಿಪಟ್ಟಿದೆ. ಬಿಜೆಪಿ 21 ಗೆದ್ದರೆ, ಅದರ ಮೂರು ಪಾಲುದಾರರಾದ ಅಜ್ಸು ಪಾರ್ಟಿ, ಲೋಕ ಜನಶಕ್ತಿ ಪಕ್ಷ(ರಾಮ್ ವಿಲಾಸ್) ಮತ್ತು ಜೆಡಿಯು ತಲಾ ಒಂದು ಸ್ಥಾನ ಗಳಿಸಿದೆ. 2019ರ ಚುನಾವಣೆಯಲ್ಲಿ ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟ 47 ಸ್ಥಾನಗಳಲ್ಲಿ ಜಯಭೇರಿ ಬಾರಿಸಿತ್ತು.