ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮತ್ತೆ ಮುಂದೂಡಿದೆ.
ಹೈಕೋರ್ಟ್ ನಲ್ಲಿ ಇಂದು ನಡೆದ ದರ್ಶನ್ ಜಾಮೀನು ಅರ್ಜಿ ವಿಚಾರಣೆಯಲ್ಲಿ ದರ್ಶನ್ ಪರ ವಕೀಲ ಸಿ.ವಿ.ನಾಗೇಶ್ ಸುದೀರ್ಘವಾಗಿ ವಾದ ಮಂಡಿಸಿದರು. ಕಾಲಾವಾಕಾಶ ಮುಗಿದ ಹಿನ್ನೆಲೆಯಲ್ಲಿ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾ.ವಿಶ್ವಜಿತ್ ಶೆಟ್ಟಿ ಮುಂದೂಡಿದರು.
ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಎರಡು ದಿನಗಳ ಕಾಲ ಅಂದರೆ ನವೆಂಬರ್ 28ಕ್ಕೆ ನಿಗದಿಪಡಿಸಿ ವಿಚಾರಣೆ ಮುಂದೂಡಲಾಗಿದೆ.
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್ ಬೆನ್ನು ನೋವು ಸಮಸ್ಯೆ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ಪಡೆದು ಬಿಡುಗಡೆಯಾಗಿದ್ದಾರೆ. ಚಿಕಿತ್ಸೆಗಾಗಿ ದರ್ಶನ್ ಗೆ ಹೈಕೋರ್ಟ್ 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಈ ಹಿನ್ನೆಲೆಯಲ್ಲಿ ಸದ್ಯ ದರ್ಶನ್ ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ ದರ್ಶನ್ ಗೆ ವೈದ್ಯರು ಸರ್ಜರಿಗೆ ಸೂಚಿಸಿದ್ದರು ಕೂಡ ಸರ್ಜರಿಗೆ ಒಳಗಾಗುತ್ತಿಲ್ಲ ಎನ್ನಲಾಗಿದೆ. ಇದೇ ವೇಳೆ ಬೆಂಗಳೂರು ಪೊಲೀಸರು ದರ್ಶನ್ ಮಧ್ಯಂತರ ಜಾಮೀನು ರದ್ದು ಮಾಡುವಂತೆ ಕೋರಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಈ ಎಲ್ಲಾ ಬೆಳವಣಿಗೆ ನಡುವೆಯೇ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.