ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು ರದ್ದು ಮಾಡಬೇಕು ಎಂಬ ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಠದ ಪೀಠಾಧ್ಯಕ್ಷ ಚಂದ್ರಶೇಖರನಾಥ ಸ್ವಾಮೀಜಿ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಸ್ವಾಮೀಜಿಗಳ ಹೇಳಿಕೆ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ಎಚ್ಚೆತ್ತ ಚಂದ್ರಶೇಖರನಾಥ ಸ್ವಾಮೀಜಿ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸ್ವಾಮೀಜಿ, ಬೆಂಗಳೂರು ನಗರದ ಫ್ರೀಡಂ ಪಾರ್ಕ್ ನಲ್ಲಿ ನಡೆದ ಭಾರತೀಯ ಕಿಸಾನ್ ಸಂಘ ಆಯೋಜಿಸಿದ್ದ ಸಾರ್ವಜನಿಕ ಸಮಾವೇಶದಲ್ಲಿ ಮುಸಲ್ಮಾನರಿಗೆ ಮತದಾನದ ಹಕ್ಕು ರದ್ದುಪಡಿಸಬೇಕು ಎಂಬ ನನ್ನ ಹೇಳಿಕೆ ಚರ್ಚೆಗೆ ಕಾರಣವಗಿದೆ. ಬಾಯಿತಪ್ಪಿನಿಂದ ನೀಡಿರುವ ಹೇಳಿಕೆಯಿಂದ ಮುಸಲ್ಮಾನ ಸಹೋದರರಿಗೆ ಬೇಸರವಾಗಿದ್ದರೆ ವಿಷಾದ ವ್ಯಕ್ತಪಡಿಸುವುದಾಗಿ ತಿಳಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ವಕ್ಫ್ ಮಂಡಳಿ, ನೂರಾರು ವರ್ಷಗಳಿಂದ ಉಳಿಮೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ರೈತಾಪಿ ಜನರನ್ನು ಒಕ್ಕಲೆಬ್ಬಿಸಿ ಅವರನ್ನು ಬೀದಿಗೆ ತಳ್ಳುವ ಕೆಲಸ ಮಾಡುತ್ತಿವೆ. ರೈತರನ್ನು ಒಕ್ಕಲೆಬ್ಬಿಸುವ ಯಾವುದೇ ಸಂಸ್ಥೆಯ ನಡೆ ಒಪ್ಪಲಾಗದು.
ವಕ್ಫ್ ಮಂಡಳಿಗಳಿಗೆ ಅವರು ಹೊಂದಿರುವ ಜಮೀನು ಯಾವ ರೀತಿ ಅವರಿಗೆ ಬಂದಿದೆ ಎಂಬುದನ್ನು ನಿಖರವಾದ ಮಾಹಿತಿಯನ್ನು ಸರ್ಕಾರಕ್ಕೆ ಅವರು ನೀಡಿ, ಆ ಜಮೀನು ಅವರು ಉಳಿಸಿಕೊಳ್ಳಲು ನಮಗೆ ಯಾವುದೇ ಅಭ್ಯಂತರವಿಲ್ಲ. ಆದರೆ ತಲತಲಾಂತರಗಳಿಂದ ಕೃಷೀ ಮಾಡುತ್ತಿರುವ ನಮ್ಮ ರೈತರನ್ನು ವ್ವಕ್ಫ್ ಮಂಡಳಿಯ ಹೆಸರು ಹೇಳಿ ಜಾಗ ಖಾಲಿ ಮಾಡಿಸುವಂತಿಲ್ಲ.
ಮುಸಲ್ಮಾನರೂ ಸಹ ಈ ದೇಶದ ಪ್ರಜೆಗಳೆ ಅವರಿಗೂ ಮತದಾನದ ಹಕ್ಕು ಇರುತ್ತದೆ. ನಿನ್ನೆಯ ದಿನ ನಾವು ಬಾಯಿ ತಪ್ಪಿ ನೀಡಿರುವ ಹೇಳಿಕೆಯಿಂದ ಮುಸಲ್ಮಾನ ಸಹೋದರರಿಗೆ ಬೇಸರವಾಗಿದ್ದರೆ ಅದಕ್ಕಾಗಿ ವಿಷಾದ ವ್ಯಕ್ತಪಡಿಸುತ್ತೇವೆ ಎಂದು ಸ್ವಾಮೀಜಿ ಸ್ಪಷ್ಟಪಡಿಸಿದ್ದಾರೆ.