ಬೆಂಗಳೂರು: ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಬಾಣಂತಿಯರ ಸರಣಿ ಸಾವಿನ ಸಂಬಂಧ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಲಿದ್ದಾರೆ.
ಸಂಜೆ 4:30ಕ್ಕೆ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಪರಿಶೀಲನಾ ಸಭೆ ನಡೆಸದಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆಗೆ ಸಿಎಂ ಸಭೆ ನಡೆಸಲಿದ್ದು, ಸಭೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಭಾಗವಹಿಸಲಿದ್ದಾರೆ.
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ನಾಲ್ವರು ಬಾಣಂತಿಯರ ಸಾವಿಗೆ ಗ್ಲುಕೋಸ್ ಕಾರಣವಾಗಿರಬಹುದು ಎನ್ನುವ ಶಂಕೆಯನ್ನು ಆರೋಗ್ಯ ಇಲಾಖೆ ವ್ಯಕ್ತಪಡಿಸಿದ್ದು, ಪರೀಕ್ಷೆಗಾಗಿ ಅದನ್ನು ಪ್ರಯೋಗ ಕಳುಹಿಸಲಾಗಿದೆ. ರಿಂಗರ್ ಲ್ಯಾಕ್ಟೇಟಟ್ ಸಲ್ಯೂಷನ್ ಸಾವಿಗೆ ಕಾರಣವಾಗಿದ್ದಲ್ಲಿ ಕಂಪನಿಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ನಾಲ್ವರು ಬಾಣಂತಿಯರ ಸಾವಿಗೆ ಸಂಬಂಧಿಸಿದಂತೆ ನಡೆದ ಪ್ರಾಥಮಿಕ ತನಿಖೆಯಲ್ಲಿ ಆಸ್ಪತ್ರೆಯ ಲೋಪ ಕಂಡು ಬಂದಿಲ್ಲ. ಸ್ವತಂತ್ರವಾಗಿ ವಿವರವಾದ ತನಿಖೆಯನ್ನು ಪ್ರತ್ಯೇಕವಾಗಿ ನಡೆಸಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ಆಯುಕ್ತರು ಹೇಳಿದ್ದಾರೆ.