HomeKarnatakaಡ್ರಗ್ ಕಂಟ್ರೋಲರ್ ಸಸ್ಪೆಂಡ್, ಕಂಪನಿ ಕಪ್ಪು ಪಟ್ಟಿಗೆ, ತನಿಖೆಗೆ ತಜ್ಞರ ಸಮಿತಿ ರಚನೆ: ಬಾಣಂತಿಯರ ಸರಣಿ...

ಡ್ರಗ್ ಕಂಟ್ರೋಲರ್ ಸಸ್ಪೆಂಡ್, ಕಂಪನಿ ಕಪ್ಪು ಪಟ್ಟಿಗೆ, ತನಿಖೆಗೆ ತಜ್ಞರ ಸಮಿತಿ ರಚನೆ: ಬಾಣಂತಿಯರ ಸರಣಿ ಸಾವಿನ ಹಿನ್ನಲೆ ಕಠಿಣ ಕ್ರಮಕ್ಕೆ ಸಿಎಂ ಆದೇಶ

ಬೆಂಗಳೂರು: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರ್ತವ್ಯಲೋಪಕ್ಕಾಗಿ ಡ್ರಗ್ ಕಂಟ್ರೋಲರ್ ಉಮೇಶ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಇತ್ತೀಚೆಗೆ ಸಂಭವಿಸಿದ ಬಾಣಂತಿಯರ ಸಾವಿನ ಕುರಿತಾಗಿ ಉನ್ನತ ಮಟ್ಟದ ಸಭೆ ನಡೆಸಿದ ಸಿಎಂ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.

ರಿಂಗರ್‌ ಲ್ಯಾಕ್ಟೇಟ್‌ ದ್ರಾವಣ ಪೂರೈಸಿರುವ ಪಶ್ಚಿಮ ಬಂಗಾಳದ ಕಂಪೆನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ, ಕಂಪೆನಿ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲು ಆದೇಶಿಸಲಾಗಿದೆ. ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸರ್ಕಾರದಿಂದ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಡ್ರಗ್ ಪೂರೈಸಿದ ಕಂಪೆನಿಯಿಂದಲೂ  ಪರಿಹಾರವನ್ನು ವಸೂಲು ಮಾಡಿ, ಮೃತರ ಕುಟುಂಬಕ್ಕೆ ನೀಡಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಸಂಭವಿಸಿರುವ ಈ ರೀತಿಯ ಸಾವಿನ ಪ್ರಕರಣಗಳ ಬಗ್ಗೆ ತನಿಖೆ ನಡೆಸಲು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಲು ನಿರ್ಧರಿಸಲಾಗಿದೆ. ಬಾಣಂತಿಯರ ಸಾವಿನ ಕುತು ತಜ್ಞರ ಸಮಿತಿ ರಚಿಸಿ ಘಟನಾವಳಿಗಳ ಬಗ್ಗೆ ಪ್ರಾಥಮಿಕ ವರದಿ ಪಡೆಯಲಾಗಿದೆ. ಬಾಣಂತಿಯರಿಗೆ ನೀಡಲಾಗಿರುವ ರಿಂಗರ್‌ ಲ್ಯಾಕ್ಟೇಟ್‌ ದ್ರಾವಣದ ಎಲ್ಲಾ ಬ್ಯಾಚ್‌ಗಳ ಬಳಕೆಯನ್ನು ಹಿಂಪಡೆಯಲಾಗಿದ್ದು, ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಳಸಲಾದ ದ್ರಾವಣ ಪರೀಕ್ಷಿಸಲು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.

ತಮಿಳುನಾಡು ಮಾದರಿಯಲ್ಲಿ ಔಷಧಿಗಳ ಖರೀದಿ ಪ್ರಕ್ರಿಯೆ ಹಾಗೂ ಔಷಧ ನಿಯಂತ್ರಣ ಇಲಾಖೆಯನ್ನು ಪುನಾರಚನೆ ಮಾಡುವ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿದೆ. ಇನ್ನು ಮುಂದೆ ಈ ರೀತಿಯ ದುರ್ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದರು.

ಪ್ರಯೋಗಾಲಯದ ವರದಿ ಬಂದ ಬಳಿಕ ಘಟನೆಗೆ ಜವಾಬ್ದಾರರಾದ ಪ್ರತಿಯೊಬ್ಬರನ್ನು ಗುರುತಿಸಿ ಕ್ರಮ ಕೈಗೊಳ್ಳಲಾಗುತ್ತದೆ. ಡ್ರಗ್‌ ಕಂಟ್ರೋಲರ್‌ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳಲು ಆದೇಶ ನೀಡಲಾಗಿದೆ. ಔಷಧ ನಿಯಂತ್ರಣ ಕಾಯ್ದೆಯನ್ನು ಇನ್ನಷ್ಟು ಬಿಗಿಗೊಳಿಸುವ ಕುರಿತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಹಲವು ರೀತಿಯ ಗಂಭೀರ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular