ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಫೆಂಗಲ್ ಚಂಡಮಾರುತ ಅಬ್ಬರಿಸುತ್ತಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಫೆಂಗಲ್ ಚಂಡಮಾರುತದಿಂದಾಗಿ ತಮಿಳುನಾಡು, ಪುದುಚೇರಿಯಲ್ಲಿ ಭಾರಿ ಮಳೆ ಆಗುತ್ತಿದ್ದು, ಇದರ ಪರಿಣಾಮ ಶನಿವಾರ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ಕಂಡು ಬಂದಿದೆ. ಅಲ್ಲಲ್ಲಿ ಮಳೆಯಾದ ವರದಿಯಾಗಿದೆ.
ಭಾನುವಾರದಿಂದ ರಾಜ್ಯದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಡಿಸೆಂಬರ್ 2ರಂದು ಚಾಮರಾಜನಗರ, ಮೈಸೂರು, ಮಂಡ್ಯ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಡಿಸೆಂಬರ್ 3ರಂದು ರಾಮನಗರ, ಮಂಡ್ಯ, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಕೊಡಗು, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.