ಬೆಂಗಳೂರು: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮಾಗಡಿ ರಸ್ತೆ ಸಂಚಾರ ಪೊಲೀಸ್ ಠಾಣೆಯ ಕಾನ್ ಸ್ಟೆಬಲ್ ಮಹೇಶ್ ಭಾನುವಾರ ಮೃತಪಟ್ಟಿದ್ದಾರೆ.
ಮೂಲತಃ ನೆಲಮಂಗಲದವರಾದ ಮಹೇಶ್ 2003ರಲ್ಲಿ ಪೊಲೀಸ್ ಇಲಾಖೆಯಲ್ಲಿ ಕಾನ್ ಸ್ಟೆಬಲ್ ಆಗಿ ಸೇವೆಗೆ ಸೇರಿದ್ದರು. ಪೀಣ್ಯ ಕಾನೂನು ಮತ್ತು ಸುವ್ಯವಸ್ಥೆ ಠಾಣೆ ಸೇರಿದಂತೆ ಬೆಂಗಳೂರಿನ ಹಲವು ಪೊಲೀಸ್ ಠಾಣೆಗಳಲ್ಲಿ ಅವರು ಕರ್ತವ್ಯ ನಿರ್ವಹಿಸಿದ್ದರು. ನಾಲ್ಕೂವರೆ ವರ್ಷದಿಂದ ಮಾಗಡಿ ರಸ್ತೆ ಸಂಚಾರ ಠಾಣೆಯಲ್ಲಿ ಮಹೇಶ್ ಕಾರ್ಯನಿರ್ವಹಿಸುತ್ತಿದ್ದರು.
ನೆಲಮಂಗಲದಿಂದಲೇ ದಿನ ಕೆಲಸಕ್ಕೆ ಹೋಗಿ ಬರುತ್ತಿದ್ದರು. ನವೆಂಬರ್ 19 ರಂದು ಬೆಳಿಗ್ಗೆ ಬೈಕ್ ನಲ್ಲಿ ನೆಲಮಂಗಲದಿಂದ ಬೆಂಗಳೂರಿಗೆ ಬರುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದು ಕೋಮಾ ಸ್ಥಿತಿಗೆ ತಲುಪಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ.