ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ-ಇಡಿ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಇಡಿ ಅಧಿಕಾರಿಗಳು ನಗರಾಭಿವೃದ್ಧಿ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಇಡಿ ನೋಟಿಸ್ ಜಾರಿ ಮಾಡಿದ್ದು, ನಾಳೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನಲ್ಲಿ ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ನಾಳೆ ಇಡಿ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.
ಇನ್ನು ನಗರಾಭಿವೃದ್ದಿ ಇಲಾಖೆಗೆ ನೋಟಿಸ್ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಚಿವ ಭೈರತಿ ಸುರೇಶ್, ನನಗೆ ಈವರೆಗೆ ಯಾವುದೇ ನೋಟಿಸ್ ಬಂದಿಲ್ಲ. ಇಡಿ ಅಧಿಕಾರಿಗಳಿಂದ ನನಗೆ ನೋಟಿಸ್ ಬಂದಿಲ್ಲ ಎಂದು ತಿಳಿಸಿದ್ದಾರೆ.