ಶಿವಮೊಗ್ಗ: ಫೆಂಗಲ್ ಚಂಡಮಾರುತ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ.
ಡಿಸೆಂಬರ್ 3 ರಂದು ಆರೆಂಜ್ ಅಲರ್ಟ್, ಡಿ 4 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುಂಜಾಗ್ರತಾ ಕ್ರಮ ಕೈಗೊಂಡಿದೆ.
ವಿದ್ಯಾರ್ಥಿಗಳ ಸುರಕ್ಷತೆಗಾಗಿ ಮಕ್ಕಳ ಹಿತದೃಷ್ಟಿಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮವಾಗಿ ಡಿಸೆಂಬರ್ 3ರಂದು ಮಂಗಳವಾರ ಶಿವಮೊಗ್ಗ ಜಿಲ್ಲೆಯಾದ್ಯಂತ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳು ಮತ್ತು ಅಂಗನವಾಡಿಗಳಿಗೆ ರಜೆ ನೀಡಲಾಗಿದೆ. ಈ ರಜೆ ಎಲ್ಲಾ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಮತ್ತು ಅಂಗನವಾಡಿ ಶಿಶು ಪಾಲನಾ ಕೇಂದ್ರಗಳಿಗೆ ಅನ್ವಯವಾಗುತ್ತದೆ.
ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳು ಪ್ರಸ್ತುತ ನೀಡಿರುವ ರಜೆ ಅವಧಿಯಲ್ಲಿ ನಿರ್ವಹಿಸಬೇಕಾದ ಪಠ್ಯಗಳನ್ನು ಇತರೆ ಸಾರ್ವತ್ರಿಕ ರಜಾ ದಿನಗಳಂದು ಸರಿದೂಗಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.