ಬೆಂಗಳೂರು: ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿಗೆ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಬಾಣಂತಿಯರ ಸರಣಿ ಸಾವು ಪ್ರಕರಣದಲ್ಲಿ ಸರ್ಕಾರದ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಇದುವರೆಗೆ ಆರೋಗ್ಯ ಸಚಿವರಾಗಲಿ, ವೈದ್ಯಕೀಯ ಶಿಕ್ಷಣ ಸಚಿವರಾಗಲಿ, ಜಿಲ್ಲಾ ಉಸ್ತುವಾರಿ ಸಚಿವರಾಗಲಿ ಘಟನಾ ಸ್ಥಳಕ್ಕೆ ಹೋಗದಿರುವುದು ಖಂಡನೀಯ. ಬ್ಲಾಕ್ ಲಿಸ್ಟ್ ಆಗಿರುವ ಕಂಪನಿಯಿಂದ ಔಷಧಿ ತೆಗೆದುಕೊಳ್ಳಲಾಗಿದೆ ಎಂದು ಕಿಡಿಕಾರಿದರು.
ಬಾಣಂತಿಯರ ಸರಣಿ ಸಾವು ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು. ಮೃತರ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕು. ಪ್ರಕರಣದ ಬಗ್ಗೆ ಬಿಜೆಪಿ ಲೋಕಾಯುಕ್ತಕ್ಕೆ ದೂರು ನೀಡಲಿದೆ ಎಂದು ಹೇಳಿದರು.
ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಬಾಣಂತಿಯರ ಸಾವುಇ ಪ್ರಕರಣ, ರೈತರ ಬೆಳೆ ಸಮಸ್ಯೆ ಬಗ್ಗೆ ನಾವು ಧ್ವನಿ ಎತ್ತಲಿದ್ದೇವೆ ಎಂದು ತಿಳಿಸಿದರು.