ಮಂಡ್ಯ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಜನ್ಮದಿನ ಅಂಗವಾಗಿ ಮಂಡ್ಯ ನಗರದಲ್ಲಿ ಡಿಸೆಂಬರ್ 15ರಂದು ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.
ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಮಾಜಿ ಸಚಿವ ಸಿ.ಎಸ್. ಪುಟ್ಟರಾಜು, ಮಂಡ್ಯ ನಗರದಲ್ಲಿ ಡಿಸೆಂಬರ್ 20 ರಿಂದ 22 ರವರೆಗೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಡಿಸೆಂಬರ್ 15 ರಂದು ಅಭಿನಂದನಾ ಸಮಾರಂಭ ನಡೆಸಿದಲ್ಲಿ ಗೊಂದಲ ಉಂಟಾಗುತ್ತದೆ. ಹೀಗಾಗಿ ಕಾರ್ಯಕ್ರಮ ಮುಂದೂಡುವಂತೆ ಹೆಚ್.ಡಿ. ಕುಮಾರಸ್ವಾಮಿ ಅವರು ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಕನ್ನಡ ಸಾಹಿತ್ಯ ಸಮ್ಮೇಳನ ಮುಗಿದ ಬಳಿಕ ಸಮಾರಂಭ ನಡೆಸಲಾಗುವುದು ಎಂದು ಹೇಳಿದ್ದಾರೆ.