ದಾವಣಗೆರೆ: ರಾಜ್ಯ ಸರ್ಕಾರ ರೈತರ ಬಗ್ಗೆ ತೋರುತ್ತಿರುವ ನಿರ್ಲಕ್ಷ್ಯ ಖಂಡಿಸಿ ಡಿ.13ರಂದು ರೈತ ಸಂಘಟನೆಯಿಂದ ಬೆಳಗಾವಿ ಸುವರ್ಣಸೌಧ ಮುತ್ತಿಗೆ ಹಾಕಲಾಗುವುದು ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.
ಚುನಾವಣೆಗೂ ಮುನ್ನ ಕೃಷಿಗೆ ಸಂಬಂಧಿಸಿದಂತೆ ಪ್ರಣಾಳಿಕೆಯಲ್ಲಿ ನೀಡಿದ್ದ ಘೋಷಣೆಗಳನ್ನು ಕಾಂಗ್ರೆಸ್ ಮರೆತಿದೆ. ನಮ್ಮದು ರೈತಪರ ಸರ್ಕಾರ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಕೇವಲ ಬಾಯಿಮಾತಿಗೆ ಮಾತ್ರ ಸೀಮಿತವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಧಿಕಾರಕ್ಕೆ ಬಂದು ಒಂದುವರೆ ವರ್ಷ ಕಳೆದರೂ ಭೂಸುಧಾರಣಾ ಕಾಯ್ದೆಯ ತಿದ್ದುಪಡಿ ಬಗ್ಗೆ ಯಾವುದೇ ತೀರ್ಮಾನ ಮಾಡಿಲ್ಲ. ಬಗರ್ ಹುಕುಂ ರೈತರಿಗೆ ಸಾಗುವಳಿ ಚೀಟಿ ಕೊಟ್ಟಿಲ್ಲ. ರೈತರ ಪರವಾದ ಪಹಣಿ ತಿದ್ದುಪಡಿ ಪ್ರಕ್ರಿಯೆ ಮಂದಗತಿಯಲ್ಲಿ ನಡೆಯುತ್ತಿದೆ. ಅರಣ್ಯ ಇಲಾಖೆ ಸಣ್ಣ ರೈತರಿಗೆ ಕಿರುಕುಳ ನೀಡುತ್ತಿದೆ. ಇದರಿಂದಾಗಿ ರೈತರು ಆತಂಕಗೊಂಡಿದ್ದಾರೆ. ರೈತರ ವಿಚಾರದಲ್ಲಿ ಕಾಂಗ್ರೆಸ್, ಬಿಜೆಪಿ ನಡುವೆ ಯಾವುದೇ ವ್ಯತ್ಯಾಸವಿಲ್ಲ ಎಂದು ಕಿಡಿಕಾರಿದರು.
ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಡಿ.13ರಂದು ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸುವುದಾಗಿ ತಿಳಿಸಿದರು.