ಬೆಂಗಳೂರು : ರಾಜ್ಯದ ಪ್ರೌಢಶಾಲಾ ಸಹ ಶಿಕ್ಷಕರಿಗೆ ಗುಡ್ ನ್ಯೂಸ್ ಎಂಬಂತೆ ಸರ್ಕಾರ ಶೀಘ್ರವೇ ಬಡ್ತಿ ಭಾಗ್ಯ ಕರುಣಿಸಲಿದೆ.ಪ್ರೌಢಶಾಲಾ ಸಹ ಶಿಕ್ಷಕರಿಗೆ ಭಡ್ತಿ ನೀಡುವ ಪ್ರಕ್ರಿಯೆ ಮುಂದಿನ ವರ್ಷದ ಫೆಬ್ರವರಿ ಅಂತ್ಯದೊಳಗೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಎಸ್ ಮಧುಬಂಗಾರಪ್ಪ ಹೇಳಿದ್ದಾರೆ.
ಪದೋನ್ನತಿ ಪ್ರಕ್ರಿಯೆ ನಡೆಸುವ ಹಿನ್ನೆಲೆಯಲ್ಲಿ ರಾಜ್ಯಮಟ್ಟದಲ್ಲಿ ಒಂದೇ ಜೇಷ್ಠತಾ ಪಟ್ಟಿಯನ್ನು ತಯಾರಿಸುವ ಬಗ್ಗೆ ಮಾರ್ಗದರ್ಶನ ಕೋರಿ 2024ರ ಫೆಬ್ರವರಿ ಮಾಹೆ ಮತ್ತು ಮಾರ್ಚ್ ಮಾಹೆಯಲ್ಲಿ ಶಾಲಾ ಶಿಕ್ಷಣಇಲಾಖೆಯ ಆಯುಕ್ತರು ಹಾಗೂ ಏಪ್ರಿಲ್ ಮಾಹೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ ಎಂದರು.
ಶಿಕ್ಷಣ ಇಲಾಖೆಯ ನಾಲ್ಕು ವಿಭಾಗಗಳಲ್ಲಿ ಸ್ನಾತಕೋತ್ತರ ಪದವಿ ಪಡೆದ ಅರ್ಹ ಸಹ ಶಿಕ್ಷಕರ ಜೇಷ್ಠತಾ ಪಟ್ಟಿಯನ್ನು ಪರಿಶೀಲಿಸಿ ಸಾಮಾನ್ಯ ಜೇಷ್ಠತಾ ಪಟ್ಟಿಯನ್ನು ಅಂತಿಮಗೊಳಿಸಲಾಗುತ್ತದೆ.
ಅಂತಿಮ ರಾಜ್ಯಮಟ್ಟದ ಒಂದೇ ಜೇಷ್ಠತಾ ಪಟ್ಟಿಯನ್ನು ತಯಾರಿಸಲು ಕರ್ನಾಟಕ ಸರ್ಕಾರಿ ನೌಕರರ ನಿಯಮಗಳು 1957ರ ನಿಯಮ 7-ಎರ ನಿಯಮದನ್ವಯ ಪರಿಶೀಲಿಸಿ ಅಗತ್ಯ ಕ್ರಮವಹಿಸಲು 2024ರ ಅಕ್ಟೋಬರ್ ಮಾಹೆಯಲ್ಲಿ ಪತ್ರ ಬರೆಯಲಾಗಿದೆ.ಈ ಸಂಬಂಧ ಕ್ರಮ ಕೈಗೊಳ್ಳಲು ಬೆಂಗಳೂರಿನ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಿಗೆ, ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಿಗೆ ನಿರ್ದೇಶನ ನೀಡಲಾಗಿದ್ದು, ಇದರನ್ವಯ ಪದೋನ್ನತಿ ಪ್ರಕ್ರಿಯೆಯನ್ನು ಬೇಗ ನಿಯಮಾನುಸಾರ ನಡೆಸಲು ಕ್ರಮ ವಹಿಸಲಾಗುವುದು ಎಂದಿದ್ದಾರೆ.