ಚಿಕ್ಕಮಗಳೂರು: ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಇತ್ತೀಚೆಗೆ ಆಯ್ಕೆಯಾಗಿದ್ದ ದೇವೇಂದ್ರ ಅವರನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಕರ್ತವ್ಯದಿಂದ ಅಮಾನತು ಮಾಡಿದೆ.
ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ವಿರುದ್ಧ ಪತ್ರಿಕಾಗೋಷ್ಠಿಯಲ್ಲಿ ಆರೋಪ ಮಾಡಿದ ಹಿನ್ನೆಲೆಯಲ್ಲಿ ದೇವೇಂದ್ರ ವಿರುದ್ಧ ಇಲಾಖೆ ಕ್ರಮ ಕೈಗೊಂಡಿದೆ. ಹೌಸಿಂಗ್ ಬೋರ್ಡ್ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದ ದೇವೇಂದ್ರ ವಿರುದ್ಧ ವಿಚಾರಣೆ ಕಾಯ್ದಿರಿಸಿ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಾದ ಸಿಂಧು ಬಿ. ರೂಪೇಶ್ ಅಮಾನತು ಆದೇಶ ಹೊರಡಿಸಿದ್ದಾರೆ. ಅವರ ಹುದ್ದೆಯ ಹಕ್ಕನ್ನು ಉಡುಪಿ ಜಿಲ್ಲೆ ಬೈಂದೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ವರ್ಗಾಯಿಸಿದ್ದಾರೆ.
ನೌಕರರ ಸಂಘದ ಚುನಾವಣೆಯ ಸಂದರ್ಭದಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ದೇವೇಂದ್ರ ಅವರು ನೌಕರರಿಗೆ ಎಸ್.ಎಲ್. ಭೋಜೇಗೌಡ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದರು. ಇದರಿಂದ ತಮ್ಮ ಸಾರ್ವಜನಿಕ ಜೀವನಕ್ಕೆ ಕಪ್ಪು ಚುಕ್ಕೆ ಉಂಟಾಗಿ ತೇಜೋವಧೆ ಮಾಡಿರುವ ದೇವೇಂದ್ರ ವಿರುದ್ಧ ಕ್ರಮ ಕೈಗೊಳ್ಳುವಂತೆ ಭೋಜೇಗೌಡ ಪತ್ರ ಬರೆದಿದ್ದರು. ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಿಂದ ವರದಿ ಪಡೆದ ನಿರ್ದೇಶಕರು ಅಮಾನತು ಆದೇಶ ಹೊರಡಿಸಿದ್ದಾರೆ.