ಬೆಂಗಳೂರು : 1000 ‘ಗ್ರಾಮ ಆಡಳಿತ ಅಧಿಕಾರಿ’ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ಮಾಹಿತಿಯೊಂದನ್ನು ನೀಡಿದೆ. ಸರ್ಕಾರ ಹೊರಡಿಸಿರುವ ಸುತ್ತೋಲೆಯಲ್ಲಿ ಏನಿದೆ..ಇಲ್ಲಿದೆ ಸಂಪೂರ್ಣ ಮಾಹಿತಿ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮುಖೇನ ನೇಮಕಾತಿ ಮಾಡಲು ಉಲ್ಲೇಖ(1)ರಲ್ಲಿ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿರುತ್ತದೆ.
ಅದರಂತೆ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಒಟ್ಟು 5,70,982 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಸದರಿ ಅಭ್ಯರ್ಥಿಗಳಿಗೆ ದಿನಾಂಕ:29.09.2024 ರಂದು ಕಡ್ಡಾಯ ಕನ್ನಡ ಪರೀಕ್ಷೆಯನ್ನು ನಡೆಸಲಾಗಿ ಸದರಿ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಒಟ್ಟು 4,16,459 ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ.
ಕರ್ನಾಟಕ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 166 ಸೇನೆನಿ 2024 ದಿನಾಂಕ:10.09.2024 ರಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್ -ಸಿ ಮತ್ತು ಗ್ರೂಪ್ ಬಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಲಾಗಿರುವ ಅಧಿಸೂಚನೆಗಳಿಗೆ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆಯನ್ನು ನೀಡಿ ಆದೇಶಿಸಿದ ಹಿನ್ನೆಲೆಯಲ್ಲಿ ಪ್ರಸ್ತಾಪಿತ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅವಕಾಶ ನೀಡಲಾಗಿರುತ್ತದೆ. ಅದರಂತೆ ಒಟ್ಟು 62,927 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಹೊಸದಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದಿನಾಂಕ:26.10.2024 ರಂದು ಕಡ್ಡಾಯ ಕನ್ನಡ ಮತ್ತು ಒಟ್ಟು 4,79,386 ಅಭ್ಯರ್ಥಿಗಳಿಗೆ ದಿನಾಂಕ:27.10.2024 ರಂದು ಎಲ್ಲಾ ಜಿಲ್ಲೆಗಳಲ್ಲಿ ಪತ್ರಿಕೆ -1 ಮತ್ತು ಪತ್ರಿಕೆ -2ರ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿರುತ್ತದೆ.
ಅದರಂತೆ ಅಭ್ಯರ್ಥಿಗಳ ಪತ್ರಿಕೆ-1 ಮತ್ತು ಪತ್ರಿಕೆ-2 ಗಳ ತಾತ್ಕಾಲಿಕ ಅಂಕ ಪಟ್ಟಿಯನ್ನು ಪ್ರಾಧಿಕಾರ ಪ್ರಕಟಿಸಿ ದಿನಾಂಕ:28.11.2024ರೊಳಗೆ ಸದರಿ ತಾತ್ಕಾಲಿಕ ಅಂಕಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿರುತ್ತದೆ.
ಅದರಂತೆ ತಾತ್ಕಾಲಿಕ ಅಂಕಪಟ್ಟಿಗೆ ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಶೀಲಿಸಿ ದಿನಾಂಕ:09.12.2024 ರಂದು ಜಿಲ್ಲಾವಾರು ಅಂತಿಮ ಅಂಕ ಪಟ್ಟಿಯನ್ನು ಪ್ರಾಧಿಕಾರ ತನ್ನ ವೆಬ್ಸೈಟ್ ನಲ್ಲಿ ಪ್ರಕಟಿಸಿರುತ್ತದೆ. ಅಂತಿಮ ಅಂಕಪಟ್ಟಿಯಲ್ಲಿನ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾದ ಮತ್ತು ಅರ್ಹತೆ ಹೊಂದಿದ ಅಭ್ಯರ್ಥಿಗಳ ವಿವರಗಳು ಈ ಕೆಳಗಿನಂತಿದೆ.