ಬೆಳಗಾವಿ: ಎಲ್ಲಾ ಆಸ್ತಿಗಳನ್ನು ಸ್ಕ್ಯಾನಿಂಗ್ ಮಾಡಿ ಮನೆಮನೆಗೆ ಖಾತಾ ವಿತರಿಸಲು ನಿರ್ಧರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಬಿಬಿಎಂಪಿ ಎರಡನೇ ತಿದ್ದುಪಡಿ ವಿಧೇಯಕ ಕುರಿತು ಚರ್ಚೆಯ ವೇಳೆ ವಿಪಕ್ಷ ಸದಸ್ಯರ ಪ್ರಶ್ನೆಗಳಿಗೆ ಉತ್ತರ ನೀಡಿದ ಅವರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ಆಸ್ತಿಗಳನ್ನು ಸ್ಕ್ಯಾನಿಂಗ್ ಮಾಡಿ ಮನೆಮನೆಗೆ ಖಾತಾ ವಿತರಿಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.
ಬಿಬಿಎಂಪಿಯಲ್ಲಿ ಅಂದಾಜು 7 ಲಕ್ಷ ಆಸ್ತಿಗಳು ತೆರಿಗೆ ವ್ಯಾಪ್ತಿಗೆ ಬಂದಿಲ್ಲ. ಎರಡು ಮಹಡಿ ಪರವಾನಿಗೆ ಪಡೆದು ನಾಲ್ಕು ಮಹಡಿ ನಿರ್ಮಿಸಿಕೊಂಡಿದ್ದಾರೆ. ಎರಡು ಮಹಡಿಗೆ ಮಾತ್ರ ತೆರಿಗೆ ಪಾವತಿಸುತ್ತಿದ್ದಾರೆ. ಹೀಗಾಗಿ ಒಟಿಎಸ್ ಮೂಲಕ ಅವರನ್ನು ತೆರಿಗೆ ವ್ಯಾಪ್ತಿಗೆ ತರಲು ವಿಧೇಯಕಕ್ಕೆ ತಿದ್ದುಪಡಿ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಈಗಾಗಲೇ ತೆರಿಗೆ ಪಾವತಿಸಿದ ಆಸ್ತಿ ಮಾಲೀಕರಿಗೆ ಮುಂಬರುವ ದಿನಗಳಲ್ಲಿ ತೆರಿಗೆಯಲ್ಲಿ ವಿನಾಯಿತಿ ಸೌಲಭ್ಯ ಕಲ್ಪಿಸಲಾಗುವುದು. ಇದುವರೆಗೆ 4284 ಕೋಟಿ ರೂಪಾಯಿ ತೆರಿಗೆ ಸಂಗ್ರಹವಾಗಿದೆ ಎಂದು ತಿಳಿಸಿದ್ದಾರೆ.