ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ಅಶ್ಲೀಲ ಪದ ಬಳಕೆ ಆರೋಪ ಕೇಳಿಬಂದಿದ್ದು, ಸಿ.ಟಿ ರವಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ದೂರು ನೀಡಿದೆ.
ಇದೀಗ ಬೆಳಗಾವಿ ಸುವರ್ಣಸೌಧದಲ್ಲಿ ಸಿಟಿ ರವಿಗೆ ಮುತ್ತಿಗೆ ಹಾಕಲು ಯತ್ನಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. 15 ಕ್ಕೂ ಹೆಚ್ಚು ಬೆಂಬಲಿಗರನ್ನು ವಶಕ್ಕೆ ಪಡೆದ ಪೊಲೀಸರು ಹೀರೇಬಾಗೇವಾಡಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.
ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸಚಿವರು, ಶಾಸಕರು ಅಮಿತ್ ಶಾ ವಿರುದ್ಧ, ಅಂಬೇಡ್ಕರ್ ಭಾವಚಿತ್ರ ಹಿಡಿದು ಪ್ರತಿಭಟನೆ ನಡೆಸುತ್ತಿದ್ದ ವೇಳೆ, ಪರಿಷತ್ ಸದಸ್ಯ ಸಿ.ಟಿ.ರವಿ ರಾಹುಲ್ ಗಾಂಧಿ ಅವರನ್ನು ನಿಂದಿಸಿದ್ದಾರೆ. ಈ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ಷೇಪ ವ್ಯಕ್ತಪಡಿದ್ದಾರೆ. ಇದಕ್ಕೆ ಸಿ.ಟಿ ರವಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎನ್ನಲಾಗಿದೆ.
ಸಚಿವರ ವಿರುದ್ಧ ಸಿ.ಟಿ.ರವಿ ಅಶ್ಲೀಲ ಪದ ಬಳಕೆ ಮಾಡಿದ್ದಕ್ಕೆ ಸಿಡಿದೆದ್ದಿರುವ ಕಾಂಗ್ರೆಸ್ ನಾಯಕರು ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ದೂರು ನೀಡಿದ್ದು, ಸಿ.ಟಿ.ರವಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.
 ಈ ಹಿನ್ನೆಲೆಯಲ್ಲಿ ಸಭಾಪತಿ ಹೊರಟ್ಟಿ, ಸದನದ ಆಡಿಯೋ, ವಿಡಿಯೋ ಪರಿಶೀಲನೆ ನಡೆಸುವಂತೆ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

 
			 
		 
		 
		 
		 Loading ...
 Loading ... 
		 
		 
		