ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬೆಂಗಳೂರಿನ ನಂದಿನಿ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆ ಕಾರ್ಯಕ್ರಮಕ್ಕೆಂದು ಶಾಸಕ ಮುನಿರತ್ನ ತೆರಳುತ್ತಿದ್ದ ವೇಳೆ ಅವರ ಕಾರಿನ ಮೇಲೆ ಕೆಲವರು ಮೊಟ್ಟೆ ಎಸೆದಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರೇ ಮೊಟ್ಟೆ ಎಸೆದಿದ್ದಾರೆ ಎಂದು ಮುನಿರತ್ನ ಹಾಗೂ ಅವರ ಬೆಂಬಲಿಗರು ಆರೋಪಿಸಿದ್ದಾರೆ.
ಘಟನೆ ಬಳಿಕ ಶಾಸಕ ಮುನಿರತ್ನ ಹಾಗೂ ಬೆಂಬಲಿಗರು ರಸ್ತೆಯಲ್ಲಿಯೇ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಕೂಡ ಸ್ಥಳಕ್ಕಾಗಮಿಸಿದ್ದು, ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಸುಳ್ಳು ಆರೋಪ ಮಾಡಲಾಗುತ್ತಿದೆ. ಮುನಿರತ್ನ ಬೆಂಬಲಿಗರೇ ಅವರ ಮೇಲೆ ಮೊಟ್ಟೆ ಎಸೆದು ಬಳಿಕ ಕಾಂಗ್ರೆಸ್ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಈ ವೇಳೆ ಕಾಂಗ್ರೆಸ್ ಹಾಗೂ ಮುನಿರತ್ನ ಬೆಂಬಲಿಗರ ನಡುವೆ ಗಲಾಟೆ ನಡೆದಿದೆ.
ಗಲಾಟೆ ವೇಳೆ ಸ್ಥಳದಲ್ಲಿದ್ದ 2-3 ಕಾರುಗಳು ಜಖಂಗೊಂಡಿವೆ. ಪರಿಸ್ಥಿತಿ ಕೈ ಮೀರುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಗಲಾಟೆ ನಿಲ್ಲಿಸಿದ್ದಾರೆ. ಹಲವರನ್ನು ವಶಕ್ಕೆ ಪಡೆದಿದ್ದಾರೆ.