ಬೆಳಗಾವಿ: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಂಸದ ಡಿ.ಕೆ.ಸುರೇಶ್, ಗೂಂಡಾಗಳಿಂದ ಗಲಾಟೆ ಮಾಡಿಸಿ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ತನ್ನ ಮೇಲೆ ಮೊಟ್ಟೆ ಎಸೆದ ಘಟನೆ ಹಿಂದೆ ಡಿ.ಕೆ.ಸುರೇಶ್, ಡಿ.ಕೆ.ಶಿವಕುಮಾರ್ ಕಾರಣ ಎಂದು ಆರೋಪಿಸಿದ್ದ ಮುನಿರತ್ನ ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿ.ಕೆ.ಸುರೇಶ್, ಕಾಂಗ್ರೆಸ್ ಕಾರ್ಯಕರ್ತರಿಗೆ ಅವರೇ ಕೊಲೆ ಬೆದರಿಕೆ ಹಾಕುತ್ತಿದ್ದಾರೆ. ಅವರ ಮೇಲೆ ಮೊಟ್ಟೆ ಎಸೆದ ಪ್ರಕರಣ ನನಗೆ ಗೊತ್ತಿಲ್ಲ ಎಂದರು.
ಮುನಿರತ್ನ ವ್ಯಕ್ತಿತ್ವ ಏನು ಎಂಬುದು ಇಡೀ ರಾಜ್ಯಕ್ಕೆ ಗೊತ್ತಿದೆ. ಬಿಜೆಪಿಯವರಾಗಲಿ, ಬೇರೆಯವರಾಗಲಿ ನನ್ನ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಹೇಳಿದರು.