ಬೆಳಗಾವಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನಲೆಯಲ್ಲಿ ಬೆಳಗಾವಿಯಲ್ಲಿ ಇಂದು ನಡೆಯಬೇಕಿದ್ದ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ.
ಮನಮೋಹನ್ ಸಿಂಗ್ ನಿಧನದ ಗೌರವಾರ್ಥ ಬೆಳಗಾವಿಯ ಕಾಂಗ್ರೆಸ್ ಸಮಾವೇಶ ನಡೆಯಬೇಕಿದ್ದ ಮುಖ್ಯ ವೇದಿಕೆಯಲ್ಲಿ ಬೆಳಕ್ಕೆ 10.30ಕ್ಕೆ ಸಂತಾಪ ಸೂಚಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಗುರುವಾರ ರಾತ್ರಿ ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಅವರ ಗೌರವಾರ್ಥ ಶುಕ್ರವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. 7 ದಿನಗಳ ಕಾಲ ಶೋಕಾಚರಣೆ ಘೋಷಿಸಲಾಗಿದೆ. ಸರ್ಕಾರಿ ಮತ್ತು ಪಕ್ಷದ ಕಾರ್ಯಕ್ರಮಗಳನ್ನು ಕೂಡ ರದ್ದು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ಅಂಗವಾಗಿ ಹಮ್ಮಿಕೊಂಡಿದ್ದ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಜನಾಂಗೋಲನ ಕಾರ್ಯಕ್ರಮವನ್ನು ಕೂಡ ರದ್ದು ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನಾನು ಶುಕ್ರವಾರ ದೆಹಲಿಗೆ ತೆರಳುತ್ತೇವೆ ಎಂದು ತಿಳಿಸಿದ್ದಾರೆ.