ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಸಕಾಲಕ್ಕೆ ಚಿಕಿತ್ಸೆ ಸಿಗದೇ ಗರ್ಭದಲ್ಲಿಯೇ ಮಗು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಇದೀಗ ತಾಯಿ ಕೂಡ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಬೆಳಗಾವಿಯ ದಂಪತಿಯ ದುರಂತ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಮೇಲ್ಮಟ್ಟಿ ಗ್ರಾಮದ ರಾಧಿಕಾ ಗಡ್ಡಹೊಳಿ ಎಂಟೂವರೆ ತಿಂಗಳ ಗರ್ಭಿಣಿಯಾಗಿದ್ದರು. ರಾತ್ರಿ 8 ಗಂಟೆ ಸುಮಾರಿಗೆ ರಾಧಿಕಾಳಿಗೆ ಪಿಡ್ಸ್ ಬಂದಿದ್ದು, ತಕ್ಷಣ ಯಮಕನಮರಡಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಪ್ರಾಥಮಿಕ ಚಿಕಿತ್ಸೆ ಬಳಿಕ ಬೆಳಗಾವಿಯ ಕೆ ಎಸ್ ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗರ್ಭಿಣಿ ಸ್ಥಿತಿ ಗಂಭೀರವಾಗಿದೆ ಮೊದಲು ಹಣ ಕಟ್ಟಿ ಚಿಕಿತ್ಸೆ ಕೊಡುತ್ತೇವೆ ಎಂದು ವೈದ್ಯರು ಹೇಳಿದ್ದರು.ದೊಡ್ಡಮೊಟ್ಟದ ಹಣ ಕಟ್ಟಲು ಆಗಲ್ಲ ಎಂದು ಮಧ್ಯರಾತ್ರಿ ಡಿಸ್ಚಾರ್ಜ್ ಮಾಡಿಸಿಕೊಂಡ ಕುಟುಂಬದವರು, ಗರ್ಭಿಣಿಯನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆಸ್ಪತ್ರೆಗೆ ಅಲೆಯುವ ವೇಳೆ ಮಗು ಗರ್ಭದಲ್ಲೇ ಸಾವನ್ನಪ್ಪಿದೆ. ನಂತರ ಮಹಿಳೆ ಸ್ಥಿತಿ ಗಂಭೀರವಾಗಿದ್ದು, ಮಗುವನ್ನು ಹೊರತೆಗೆಯಲು ವೈದ್ಯರು ಹರಸಾಹಸಪಟ್ಟಿದ್ದರು.ಮತ್ತೊಂದೆಡೆ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಮಹಿಳೆ ರಾಧಿಕಾ ಇದೀಗ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಪತ್ನಿ ಸಾವಿನ ವಿಷಯ ತಿಳಿದು ಪತಿ ಮಲ್ಲೇಶ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಕಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.