ಬೆಂಗಳೂರು: ಬಹುನಿರೀಕ್ಷಿತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ(ಜಾತಿ ಗಣತಿ) ವರದಿ ಮಂಡಿಸಲು ಮುಹೂರ್ತ ಫಿಕ್ಸ್ ಆಗಿದೆ. ಸಚಿವ ಸಂಪುಟ ಸಭೆಯ ಮುಂದೆ ಇದೇ ಮೊದಲ ಬಾರಿಗೆ ವರದಿ ಮಂಡನೆಯಾಗಲಿದ್ದು, ವರದಿಯನ್ನು ಸಂಪುಟ ಒಪ್ಪುತ್ತದೆಯೇ, ಇಲ್ಲವೇ ಅಧಿವೇಶನಕ್ಕೆ ಒಯ್ಯುತ್ತದೆಯೇ ಎನ್ನುವುದು ಕುತೂಹಲ ಮೂಡಿಸಿದೆ.
169 ಕೋಟಿ ರೂ. ವೆಚ್ಚದಲ್ಲಿ ಸಿದ್ದಪಡಿಸಲಾದ ವರದಿಯ ಅಂಶಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಸದಸ್ಯರೊಂದಿಗೆ ಚರ್ಚಿಸಲಿದ್ದಾರೆ. ಜಾತಿ ಗಣತಿ ವರದಿಯನ್ನು ಸದನದಲ್ಲಿ ಮಂಡಿಸಬೇಕೇ ಬೇಡವೇ ಎನ್ನುವುದರ ಕುರಿತು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು.
ಜಾತಿ ಗಣತಿ ಸಲುವಾಗಿ 2014ರಲ್ಲಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗಕ್ಕೆ ಕಾಂತರಾಜು ನೇಮಕ ಮಾಡಿದ್ದು, 2023ರಲ್ಲಿ ಪೂರ್ಣ ವರದಿಯನ್ನು ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗ್ಡೆ ಸರ್ಕಾರಕ್ಕೆ ಸಲ್ಲಿಸಿದ್ದರು. ವರದಿ ಅವೈಜ್ಞಾನಿಕವಾಗಿದೆ. ಮನೆ ಮನೆಗೆ ಹೋಗಿ ಸಮೀಕ್ಷೆ ನಡೆಸಿಲ್ಲ ಎಂದು ವೀರಶೈವ ಲಿಂಗಾಯತ, ಒಕ್ಕಲಿಗ ಸಮುದಾಯಗಳು ವಿರೋಧ ವ್ಯಕ್ತಪಡಿಸಿವೆ.
ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ವರದಿ ಮಂಡನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ದಾವಣಗೆರೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಜಾತಿ ಗಣತಿ ಪರವಾಗಿ ಇದ್ದೇನೆ. ವರದಿ ಅನುಷ್ಠಾನಕ್ಕೆ ಬದ್ಧವಾಗಿದ್ದು, ಮುಂದಿನ ಸಂಪುಟ ಸಭೆಯಲ್ಲಿ ವಿಚಾರ ಚರ್ಚಿಸುವ ಉದ್ದೇಶವಿದೆ. ಸುಪ್ರೀಂಕೋರ್ಟ್ ಒಳ ಮೀಸಲಾತಿ ನೀಡುವಂತೆ ಹೇಳಿದ್ದು, ಅದನ್ನು ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.