ಕಲಬುರಗಿ: ಕಲಬುರಗಿಯ ಸೂಪರ್ ಮಾರ್ಕೆಟ್ ಸಮೀಪ ಇರುವ ಸಿಟಿ ಬಸ್ ನಿಲ್ದಾಣ ಸಂಪರ್ಕಿಸುವ ವೃತ್ತದಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಯ ಕೈಯಲ್ಲಿರುವ ಖಡ್ಗವನ್ನು ಕಿಡಿಕೇಡಿಗಳು ಮುರಿದು ವಿರೂಪಗೊಳಿಸಿದ್ದಾರೆ.
ಇದಕ್ಕೆ ಜಿಲ್ಲಾ ಕುರುಬರ ಸಂಘದ ಮುಖಂಡರು ಟೈಯರ್ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದು, ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಪದಾಧಿಕಾರಿಗಳು ಭಾನುವಾರ ಜಗತ್ ವೃತ್ತ, ಸಿಟಿ ಬಸ್ ನಿಲ್ದಾಣ ಸಂಪರ್ಕಿಸುವ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ರಾಯಣ್ಣನ ಪ್ರತಿಮೆಗೆ ಅಪಮಾನ ಮಾಡಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು. ಪ್ರತಿಮೆಯನ್ನು ಪುನರ್ ಸ್ಥಾಪಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಅಲ್ಲಮಪ್ರಭು ಪಾಟೀಲ ಅವರು, ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳಬೇಕು. ಪ್ರತಿಮೆ ಸುತ್ತಲೂ ಸಿಸಿಟಿವಿ ಅಳವಡಿಸಬೇಕು ಎಂದು ಪೊಲೀಸರಿಗೆ ಸೂಚಿಸಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಅವರೊಂದಿಗೆ ರಾಯಣ್ಣನ ಹೊಸ ಮೂರ್ತಿ ಮರು ಸ್ಥಾಪನೆಯ ಬಗ್ಗೆ ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ.