ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ವಿರುದ್ಧ ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್f ಯತ್ನಾಳ್ ಅವರ ತಂಡದಿಂದ ದೂರು ನೀಡಲಾಗಿದೆ.
ವಿಜಯೇಂದ್ರ ಎಲ್ಲರನ್ನೂ ಜೊತೆಯಾಗಿ ಕರೆದುಕೊಂಡು ಹೋಗುತ್ತಿಲ್ಲ ಎಂದು ಭಿನ್ನರ ತಂಡ ಅಮಿತ್ ಶಾ ಅವರಿಗೆ ದೂರು ನೀಡಿದೆ. ಇತ್ತೀಚೆಗೆ ವಿಜಯೇಂದ್ರ ಅವರು ಅಮಿತ್ ಶಾ ಅವರನ್ನು ಭೇಟಿಯಾಗಿ ಯತ್ನಾಳ್ ಬಣದ ವಿರುದ್ಧ ದೂರು ನೀಡಿದ್ದರು. ಇದಕ್ಕೆ ಪ್ರತಿಯಾಗಿ ಯತ್ನಾಳ್ ಬಣದವರು ಅಮಿತ್ ಶಾ ಭೇಟಿಯಾಗಿ ದೂರು ನೀಡಿದ್ದಾರೆ.
ಮಂಗಳವಾರ ದೆಹಲಿಯಲ್ಲಿ ಅಮಿತ್ ಶಾ ಅವರನ್ನು ಭೇಟಿಯಾಗಿ ಚರ್ಚ ನಡೆಸಿದ ಯತ್ನಾಳ್ ಬಣದ ನಾಯಕರು, ವಕ್ಪ್ ಹೋರಾಟದ ಬಗ್ಗೆ ತಿಳಿಸಿದ್ದಾರೆ. ನಂತರ ವಿಜಯೇಂದ್ರ ಕಾರ್ಯವೈಖರಿ ಬಗ್ಗೆ ಆಸಮಾಧಾನ ವ್ಯಕ್ತಪಡಿಸಿ ದೂರು ನೀಡಿದ್ದಾರೆ.
ಆದರೆ ಈ ಭೇಟಿಯ ವೇಳೆ ಯತ್ನಾಳ್ ಅವರು ಇರಲಿಲ್ಲ. ಉಳಿದಂತೆ ರಮೇಶ್ ಜಾರಕಿಹೊಳಿ, ಅರವಿಂದ ಲಿಂಬಾವಳಿ, ಕುಮಾರ್ ಬಂಗಾರಪ್ಪ ಮೊದಲಾಂದ ನಾಯಕರು ಇದ್ದರು. ವಿಜಯೇಂದ್ರ ಎಲ್ಲರನ್ನು ಒಟ್ಟಿಗೆ ಕರೆದುಕೊಂಡು ಹೋಗದೆ ತಮ್ಮ ಆಪ್ತರು, ಬೆಂಬಲಿಗರನ್ನು ಮಾತ್ರ ಪರಿಗಣಿಸುತ್ತಿದ್ದಾರೆ. ಪ್ರಮುಖ ನಿರ್ಧಾರ ಕೈಗೊಳ್ಳುವಾಗ ಎಲ್ಲಾ ನಾಯಕರೊಂದಿಗೆ ಚರ್ಚೆ ನಡೆಸುತ್ತಿಲ್ಲ. ಇದು ಪಕ್ಷದ ಮೇಲೆ ಪರಿಣಾಮ ಬೀರುತ್ತಿದೆ. ಆಡಳಿತ ಪಕ್ಷ ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದು, ಸರ್ಕಾರದ ವಿರುದ್ಧದ ಹೋರಾಟಗಳು ತಾರ್ಕಿಕ ಅಂತ್ಯಕ್ಕೆ ತಲುಪುತ್ತಿಲ್ಲ. ಬರೀ ಮಾಧ್ಯಮ ಹೇಳಿಕೆಗೆ ಮಾತ್ರ ಸೀಮಿತವಾಗುತ್ತಿವೆ ಎಂದು ದೂರಿದ್ದಾರೆ ಎಂದು ಹೇಳಲಾಗಿದೆ.