ಬೆಂಗಳೂರು: ರಾಜ್ಯದ ಬಹುತೇಕ ಭಾಗದಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಎರಡರಿಂದ ನಾಲ್ಕು ಡಿಗ್ರಿ ಸೆಲ್ಸಿಯಸ್ ವರೆಗೆ ಕನಿಷ್ಠ ಉಷ್ಣಾಂಶದಲ್ಲಿ ಇಳಿಕೆ ಆಗಲಿದೆ.
ಬೆಳಗಿನ ಜಾವ ಮತ್ತು ರಾತ್ರಿಯ ವೇಳೆ ಮಂಜು ಮುಸುಕಿದ ವಾತಾವರಣ ಇರುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಬೀದರ್, ವಿಜಯಪುರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಚಾಮರಾಜನಗರ ಜಿಲ್ಲೆಗಳ ಕೆಲವು ಭಾಗದಲ್ಲಿ ಕನಿಷ್ಠ ಉಷ್ಣಾಂಶ ವಾಡಿಕೆಯ ಪ್ರಮಾಣಕ್ಕಿಂತ ಎರಡರಿಂದ ನಾಲ್ಕು ಡಿಗ್ರಿಯಷ್ಟು ಇಳಿಕೆಯಾಗುತ್ತದೆ. ಜನವರಿ 10ರವರೆಗೆ ಬೆಳಗಿನ ಜಾವ ಮತ್ತು ರಾತ್ರಿ ವೇಳೆಯಲ್ಲಿ ಮಂಜು ಮುಸುಕಿದ ವಾತಾವರಣ ಇರುತ್ತದೆ ಎಂದು ಹೇಳಲಾಗಿದೆ.