ಬೆಂಗಳೂರು : ಏಪ್ರಿಲ್ ನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷರ ಆಯ್ಕೆಯನ್ನು ಮುಂದಿನ ಏಪ್ರಿಲ್ ತಿಂಗಳ ಒಳಗೆ ಚುನಾವಣೆ ಮೂಲಕ ನಡೆಸುವ ನಿರ್ಧಾರವನ್ನು ಜೆಡಿಎಸ್ ಕೈಗೊಳ್ಳಲಿದೆ ಎಂದು ಕೇಂದ್ರ ಸಚಿವ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಪಕ್ಷದ ಸಂಘಟನೆ ಬಗ್ಗೆ ಪಕ್ಷದ ನಾಯಕರಿಗೆ ಕಠಿಣವಾಗಿಯೇ ಹೇಳಿದ್ದೇನೆ. ಯಾರು ಪ್ರಾಮಾಣಿಕವಾಗಿ ಪಕ್ಷದ ಸಂಘಟನೆಗೆ ದುಡಿಯುತ್ತಾರೋ ಅಂಥವರಿಗೆ ಆದ್ಯತೆ ಕೊಡುತ್ತೇವೆ. ನಾನು ಕೂಡ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುತ್ತೇನೆ ಎಂದರು.
ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕು ಎಂಬ ಬಗ್ಗೆ ಈ ಸಭೆಯಲ್ಲಿ ಚರ್ಚೆ ಆಗಿಲ್ಲ. ಪಕ್ಷದ ದ್ವೈವಾರ್ಷಿಕ ಸಾಂಸ್ಥಿಕ ಚುನಾವಣೆ, ಸದಸ್ಯತ್ವ ಅಭಿಯಾನ ಚುರುಕುಗೊಳಿಸುವುದು, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ತಯಾರಿ ಹಾಗೂ ಪಕ್ಷ ಸಂಘಟನೆ ವಿಷಯಗಳ ಬಗ್ಗೆ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.