ಬೆಂಗಳೂರು: ಬಿಜೆಪಿ, ಜೆಡಿಎಸ್ ಸೇರಿದಂತೆ ಎಲ್ಲಾ ಶಾಸಕರಿಗೆ ತಲಾ 10 ಕೋಟಿ ರೂಪಾಯಿ ಅನುದಾನ ಬಿಡುಗಡೆಗೆ ಸಹಿ ಹಾಕಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಗ್ಯಾರಂಟಿ ಯೋಜನೆ ಸೇರಿ ವಿವಿಧ ಕಾರಣಗಳಿಂದ ತಮ್ಮ ಕ್ಷೇತ್ರಗಳಿಗೆ ಅನುದಾನ ಸಿಗುತ್ತಿಲ್ಲ ಎಂದು ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಅನುದಾನ ಘೋಷಣೆ ಮಾಡಿದ್ದಾರೆ.
ಸೋಮವಾರ ಸಂಜೆ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಶಾಸಕರು ಅನುದಾನದ ಕೊರತೆ ಬಗ್ಗೆ ಪ್ರಸ್ತಾಪ ಮಾಡಿದ್ದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಭಾನುವಾರ ಎಲ್ಲಾ ಶಾಸಕರಿಗೆ ತಲಾ 10 ಕೋಟಿ ರೂ. ಅನುದಾನ ನೀಡುವ ಕಡತಕ್ಕೆ ಸಹಿ ಹಾಕಲಾಗಿದೆ.
ಕಾಂಗ್ರೆಸ್ ಶಾಸಕರು ಮಾತ್ರವಲ್ಲದೇ, ಎಲ್ಲಾ ಶಾಸಕರಿಗೂ ತಲಾ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ. ಈ ವೇಳೆ ಹೆಚ್ಚುವರಿ ಅನುದಾನಕ್ಕೆ ಶಾಸಕರು ಒತ್ತಾಯಿಸಿದ್ದು, ಫೆಬ್ರವರಿಯಲ್ಲಿ ಪ್ರಸ್ತಾವನೆ ಸಲ್ಲಿಸುವಂತೆ ಸಿಎಂ ತಿಳಿಸಿದ್ದಾರೆ.