ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರ್ ಅಪಘಾತಕ್ಕೀಡಾಗಿದೆ. ಅಂಬಡಗಟ್ಟಿಯ ಸಮೀಪ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಸಮೀಪ ಸಚಿವೆ ಕಾರ್ ನಲ್ಲಿ ತೆರಳುತ್ತಿದ್ದಾಗ ಘಟನೆ ನಡೆದಿದೆ.
ಕಾರ್ ನಲ್ಲಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಸೋದರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅಪಾಯದಿಂದ ಪಾರಾಗಿದ್ದಾರೆ. ನಾಯಿ ಅಡ್ಡ ಬಂದ ಹಿನ್ನೆಲೆಯಲ್ಲಿ ಅದನ್ನು ತಪ್ಪಿಸಲು ಹೋಗಿ ಕಾರ್ ಅಪಘಾತಕ್ಕೀಡಾಗಿದೆ. ನಾಯಿಗೆ ಡಿಕ್ಕಿ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿದ ಕಾರ್ ಮರಕ್ಕೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಕಾರ್ ಮುಂಭಾಗ ನಜ್ಜುಗುಜ್ಜಾಗಿದೆ. ಬೆಳಗಾವಿ ಖಾಸಗಿ ಆಸ್ಪತ್ರೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ದಾಖಲಾಗಿದ್ದಾರೆ. ಬೆಂಗಳೂರಿನಿಂದ ಬೆಳಗಾವಿಗೆ ಬರುವಾಗ ಬೆಳಗಿನ ಜಾವ 5 ಗಂಟೆಗೆ ಅಪಘಾತ ನಡೆದಿದೆ.