ಜೋಧಪುರ: 2013ರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುಗೆ ರಾಜಸ್ಥಾನ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಅಸಾರಾಂ ಬಾಪು ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಈ ಹಿನ್ನೆಲೆಯಲ್ಲಿ ಈಗ ರಾಜಸ್ಥಾನ ಹೈಕೋರ್ಟ್ ಕೂಡ ಮಾರ್ಚ್ 31ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದ ಹಿನ್ನೆಲೆಯಲ್ಲಿ ಅಸ್ಸಾರಾಂ ಬಾಪು ಪರ ವಕೀಲರು ಜೀವಾವಧಿ ಶಿಕ್ಷೆ ಅಮಾನತು ಮಾಡುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಮಧ್ಯಂತರ ಜಾಮೀನು ಮಾತ್ರ ನೀಡಲಾಗುವುದು ಎಂದಿದೆ. ಸುಪ್ರೀಂಕೋರ್ಟ್ ನೀಡಿರುವ ಷರತ್ತುಗಳೇ ಅನ್ವಯವಾಗಲಿವೆ ಎಂದು ತಿಳಿಸಿದೆ.