ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಹೆಸರಿನ ಗಾಂಧಿ ಭಾರತ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲೆಂದು ಡಿಸಿಎಂ ಡಿ.ಕೆ.ಶಿವಕುಮಾರ್ ದೇವರ ಮೊರೆ ಹೋಗಿದ್ದಾರೆ.
ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಬೆಳಗಾವಿಯ ಕಪಿಲೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಶಿವಲಿಂಗಕ್ಕೆ ಪಂಚಾಮೃತ ಅಭಿಷೇಕ, ಕ್ಷೀರಾಭಿಷೇಕ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.
ಪೂಜೆ ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಬೆಳಗಾವಿಯಲ್ಲಿ ಐತಿಹಾಸಿಕ ಕಾರ್ಯಕ್ರಮ ನಡೆಯುತ್ತಿದೆ. ಸಮಾವೇಶ ಯಶಸ್ವಿಯಾಗಬೇಕು ಎಂದು ಪೂಜೆ ಸಲ್ಲಿಸಿದ್ದೇನೆ. ನಾನು ದೇವರ ಭಕ್ತ. ಪೂಜೆ ಮಾಡದೆಯೇ ಮನೆಯಿಂದಲೂ ಹೊರಬರಲ್ಲ. ಕೆಲ ದಿನಗಳಿಂದ ಪೂಜೆ ನೆರವೇರಿಸಲು ಸಾಧ್ಯವಾಗಿರಲಿಲ್ಲ. ಹಾಗಾಗಿ ಕಪಿಲೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದೇನೆ. ನಮಗೂ ರಕ್ಷಣೆ ಬೇಕು. ರಾಜ್ಯದ ಜನತೆಗೂ ಶಾಂತಿ-ನೆಮ್ಮದಿ ಬೇಕು. ಎಲ್ಲರಿಗೂ ಒಳ್ಳೆಯದಾಗಬೇಕು. ಹಾಗಾಗಿ 101 ಲೀಟರ್ ಹಾಲಿನಿಂದ ಕ್ಷೀರಾಭಿಷೇಕ ಮಾಡಿದ್ದೇನೆ. ಭಗವಂತನಲ್ಲಿ ಭಕ್ತಿಪೂರ್ವಕವಾಗಿ ಪ್ರಾರ್ಥಿಸಿದ್ದೇನೆ ಎಂದರು.