ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ.
ಕುಂಭಮೇಳದ 19ನೇ ಸೆಕ್ಟರ್ ಪ್ರದೇಶದಲ್ಲಿ ರೈಲ್ವೆ ಬ್ರಿಡ್ಜ್ ಕೆಳಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ 20-25 ಟೆಂಟ್ ಗಳು ಬೆಂಕಿಗಾಹುತಿಯಾಗಿವೆ. ಟೆಂಟ್ ಗಳಲ್ಲಿನ ಸಿಲಿಂಡರ್ ಗಳು ಸ್ಫೊಟಗೊಳ್ಳುತ್ತಿದ್ದು, ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ವ್ಯಾಪಿಸಿದೆ. ಟೆಂಟ್ ಗಳು, ಹಲವಾರು ವಾಹನಗಳು ಸುಟ್ಟು ಭಸ್ಮವಾಗಿವೆ. ಒಂದು ಟೆಂಟ್ ನಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟದಿಂದ ಬೆಂಕಿ ಸಂಭವಿಸಿದ್ದು, ಉಳಿದ ಟೆಂಟ್ ಗಳಿಗೂ ಬೆಂಕಿ ಆವರಿಸಿ 2-3 ಸಿಲಿಂಡರ್ ಗಳು ಸ್ಫೋಟಗೊಂಡಿವೆ.
ಒಂದೆಡೆ ಬೆಂಕಿ ಅವಘಡ ಮತ್ತೊಂದೆಡೆ ಬಿರುಗಾಳಿ ಬೀಸುತ್ತಿರುವ ಪರಿಣಾಮ ಬೆಂಕಿಯ ಕೆನ್ನಾಲಿಗೆ ವ್ಯಾಪಕವಾಗಿ ಹರಡುತ್ತಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. 6 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿವೆ.