ಬೆಂಗಳೂರು: ಬಿಜೆಪಿಯಿಂದ ರಮೇಶ್ ಜಾರಕಿಹೊಳಿ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಛಾಟಿಸಬೇಕೆಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೇಣುಕಾಚಾರ್ಯ ಮತ್ತು ಕಟ್ಟಾಸುಬ್ರಹ್ಮಣ್ಯ ನಾಯ್ಡು ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ನಿಂದಿಸಿದ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ವಿರುದ್ಧ ಕ್ರಮ ಕೈಗೊಳ್ಳಬೇಕು. ಮುಲಾಜಿಲ್ಲದೇ, ಅವರನ್ನು ಪಕ್ಷದಿಂದ ಹೊರ ಹಾಕಬೇಕು ಎಂದು ಯತ್ನಾಳ್ ವಿರುದ್ಧ ರೇಣುಕಾಚಾರ್ಯ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯಿಂದ ಈ ಹಿಂದೆ ಉಚ್ಚಾಟನೆಯಾಗಿದ್ದ ಯತ್ನಾಳ್ ಯಡಿಯೂರಪ್ಪನವರ ಕಾಲು ಹಿಡಿದು ಪಕ್ಷಕ್ಕೆ ಸೇರಿದ್ದರು. ಈಗ ಅವರ ವಿರುದ್ಧವೇ ಮಾತನಾಡುತ್ತಿದ್ದಾರೆ. ಅವರಿಗೆ ಸಂಸ್ಕಾರವಿಲ್ಲ, ಸಿದ್ದಾಂತವೂ ಇಲ್ಲ. ಅವರ ವಿರುದ್ಧ ಪಕ್ಷದ ವರಿಷ್ಠರಿಗೆ ದೂರು ಕೊಡುತ್ತೇವೆ ಎಂದು ಹೇಳಿದ್ದಾರೆ.
ವಿಜಯೇಂದ್ರ ಬಚ್ಚಾ ಅಲ್ಲ, ನುರಿತ ರಾಜಕಾರಣಿ. ಪಕ್ಷದ ರಾಜ್ಯಾಧ್ಯಕ್ಷರಾಗಿ ಅವರೇ ಮುಂದುವರೆಯಲಿದ್ದು, ರಾಜ್ಯಾದ್ಯಂತ ಪಕ್ಷ ಸಂಘಟಿಸಿ ಅಧಿಕಾರಕ್ಕೆ ತರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.