ವಾಷಿಂಗ್ಟನ್: ಇಂದಿನಿಂದ ಅಮೆರಿಕದಲ್ಲಿ ಮತ್ತೆ ಡೊನಾಲ್ಡ್ ಟ್ರಂಪ್ ಯುಗ ಆರಂಭವಾಗಲಿದೆ. ಅಮೆರಿಕ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಅಮೆರಿಕದ 47ನೇ ಅಧ್ಯಕ್ಷರ ಪ್ರಮಾಣ ವಚನ ಸ್ವೀಕಾರ ಸಮಾರಂಭ ರಾತ್ರಿ 10.30ಕ್ಕೆ ನಡೆಯಲಿದೆ. ಐದು ವರ್ಷಗಳ ನಂತರ ಅಮೆರಿಕ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮದ ಸಂದರ್ಭದಲ್ಲಿ ಉಪಾಧ್ಯಕ್ಷರಾಗಿ ಆಯ್ಕೆಯಾದ ಜೆ.ಡಿ. ವ್ಯಾನ್ಸ್ ಕೂಡ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಸುಪ್ರೀಂ ಸಿಜೆ ಜಾನ್ ರಾಬರ್ಟ್ ಪ್ರಮಾಣ ವಚನ ಬೋಧಿಸಲಿದ್ದಾರೆ. ಅಮೆರಿಕ ರಾಜಧಾನಿ ವಾಷಿಂಗ್ಟನ್ ಡಿಸಿಯಲ್ಲಿ ಕಾರ್ಯಕ್ರಮ ನಡೆಯಲಿದೆ. ಟ್ರಂಪ್ ಪದಗ್ರಹಣ ಕಾರ್ಯಕ್ರಮದಲ್ಲಿ ವಿವಿಧ ದೇಶಗಳ ಗಣ್ಯರು ಭಾಗವಹಿಸಲಿದ್ದಾರೆ. ಭಾರತ ಸರ್ಕಾರದ ಪರವಾಗಿ ವಿದೇಶಾಂಗ ಸಚಿವ ಜೈಶಂಕರ್ ಭಾಗಿಯಾಗಲಿದ್ದಾರೆ. ಭಾರತದ ಉದ್ಯಮಿ ಮುಕೇಶ್ ಅಂಬಾನಿ, ಪತ್ನಿ ನೀತಾ ಅಂಬಾನಿ ಸೇರಿ ಹಲವು ಗಣ್ಯರು ಭಾಗವಹಿಸಲಿದ್ದಾರೆ. ನಿರ್ಗಮಿತ ಅಧ್ಯಕ್ಷ ಜೋ ಬಿಡೆನ್ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಕೂಡ ತಮ್ಮ ಸಂಗಾತಿಗಳೊಂದಿಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.