ತುಮಕೂರು : ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಮತ್ತೆ ಅರೆಸ್ಟ್ ಆಗಿದ್ದಾರೆ.
ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ 2 ನೇ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ರಾಮಚಂದ್ರಪ್ಪ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದ್ದು, ಪೊಲೀಸರು ಮತ್ತೆ ಆರೋಪಿಯನ್ನು ಬಂಧಿಸಿದ್ದಾರೆ.
ದೂರು ನೀಡಲು ಕಚೇರಿಗೆ ಬಂದಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು ಜಾಮೀನಿನ ಮೇಲೆ ಹೊರಬಂದಿದ್ದ ಮಧುಗಿರಿ ಡಿವೈ ಎಸ್ ಪಿ ರಾಮಚಂದ್ರಪ್ಪ ವಿರುದ್ಧ ಮತ್ತೋರ್ವ ಮಹಿಳೆ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದು, ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಕೊರಟಗೆರೆ ಮೂಲದ ಮಹಿಳೆಯೊಬ್ಬರಿಗೆ ನಿವೇಶನ ನೀಡುವುದಾಗಿ ಹೇಳಿ ವ್ಯಕ್ತಿಯೋರ್ವ ಹಣ ಪಡೆದು ವಂಚಿಸಿದ್ದ. ಈ ಬಗ್ಗೆ ಸೂಕ್ತ ಕ್ರಮಕ್ಕೆ ನಿರ್ದೇಶನ ನೀಡುವಂತೆ ಕೋರಿ ಮಹಿಳೆ ರಾಜ್ಯ ಮಹಿಳಾ ಆಯೋಗಕ್ಕೆ ಮನವಿ ಮಾಡಿದ್ದರು. ಮಹಿಳೆಯ ದೂರಿನ ಹಿನ್ನೆಲೆಯಲ್ಲಿ ಮಹಿಳಾ ಆಯೋಗ, ಈ ಸಂಬಂಧ ವಿಚಾರಣೆ ನಡೆಸುವಂತೆ ತುಮಕೂರು ಜಿಲ್ಲಾ ಪೊಲೀಸ್ ಕಚೇರಿಗೆ ಪತ್ರ ಬರೆದಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆ ನೆಪದಲ್ಲಿ ಕಚೇರಿಗೆ ಕರೆಸಿಕೊಂಡಿದ್ದ ಡಿವೈ ಎಸ್ ಪಿ ರಾಮಚಂದ್ರಪ್ಪ, ತನ್ನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮಹಿಳೆ ಮಧುಗಿರಿ ಠಾಣೆಯಲ್ಲಿ ದೂರು ನೀಡಿದ್ದರು.