ಬೆಳಗಾವಿ: ಮಹಿಳೆಯರಿಗೆ ರಕ್ಷಣೆ ದೊರಕಬೇಕು. ಬಲಾತ್ಕಾರದಂತಹ ಹೀನ ಕೃತ್ಯಗಳು ನಡೆಯಬಾರದು. ಸಮಾಜದಲ್ಲಿ ಸಮಾಜಘಾತಕ ಶಕ್ತಿಗಳು ಇಂಥ ಕೆಲಸ ಮಾಡುತ್ತವೆ. ಅವರ ವಿರುದ್ಧ ಗಂಭೀರ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಗಾಂಧೀಜಿಯವರ ತತ್ವಾದರ್ಶಗಳನ್ನು ಪುನರ್ ಸ್ಥಾಪಿಸಲು ವರ್ಷವಿಡೀ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಇಡೀ ವರ್ಷ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಅಭಿಯಾನವನ್ನು ಮಾಡುತ್ತಿದ್ದೇವೆ. ಗಾಂಧೀಜಿ ಹಾಗೂ ಅವರ ವಿಚಾರಧಾರೆಗಳು ಇಡೀ ವಿಶ್ವಕ್ಕೆ ಇಂದಿಗೂ ಪ್ರಸ್ತುತ ಎಂದರು.
ಗಾಂಧೀಜಿ ಸೌಹಾರ್ದತೆ, ಸಮಾನತೆ ಬರಬೇಕು, ಅಸ್ಪೃಶ್ಯತೆ ಹೋಗಲಾಡಿಸಲು, ಮಹಿಳೆಯರಿಗೆ ಸ್ವಾತಂತ್ರ್ಯ ಅವರ ಹಕ್ಕುಗಳ ರಕ್ಷಣೆಯಾಗಬೇಕೆಂದು ಪ್ರತಿಪಾದಿಸಿದ್ದರು.
ಗಾಂಧೀಜಿ, ಬಸವಣ್ಣ, ಕನಕದಾಸರ ವಿಚಾರಗಳು ಸಂವಿಧಾನದಲ್ಲಿ ಅಡಕವಾಗಿವೆ ಎಂದರು. ಗಾಂಧೀಜಿ, ಅಂಬೇಡ್ಕರ್ ಮತ್ತು ಸಂವಿಧಾನವನ್ನು ವಿರೋಧಿಸುವ ಅನಾಹುತಕಾರಿ ರಾಜಕಾರಣ ನಡೆಯುತ್ತಿದೆ. ಅದ್ದರಿಂದ ಇವುಗಳ ರಕ್ಷಣೆ ಮಾಡುವುದು ಕಾಂಗ್ರೆಸ್ ನ ಜವಾಬ್ದಾರಿ. ನಾವು ಸಂವಿಧಾನದ ಪರವಾಗಿದ್ದೇವೆ. ಅವರು ಮನುವಾದದ ಪರವಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.