ದೆಹಲಿ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. 40 ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಥಾನ ಪಡೆದುಕೊಂಡಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಪಕ್ಷದ ನಾಯಕಿ ಸೋನಿಯಾ ಗಾಂಧಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಹಲವು ನಾಯಕರು ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿದ್ದಾರೆ.
ಆದರೆ, ಈ ಪಟ್ಟಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸ್ಥಾನ ನೀಡಲಾಗಿಲ್ಲ. ಕರ್ನಾಟಕದಿಂದ ಮಲ್ಲಿಕಾರ್ಜುನ ಖರ್ಗೆ, ಡಿ.ಕೆ. ಶಿವಕುಮಾರ್ ಅವರಿಗೆ ಸ್ಥಾನ ನೀಡಲಾಗಿದೆ. ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಕುರಿತಂತೆ ಭಾರಿ ಚರ್ಚೆಯೇ ನಡೆದಿದೆ. ಡಿಸಿಎಂ ಡಿ.ಕೆ. ಮುಖ್ಯಮಂತ್ರಿ ಆಗಬೇಕೆಂದು ಅವರ ಬೆಂಬಲಿಗರು ಬಹಿರಂಗವಾಗಿಯೇ ಪ್ರಸ್ತಾಪಿಸುತ್ತಿದ್ದಾರೆ.
ಈ ನಡುವೆ ಕಾಂಗ್ರೆಸ್ ನಲ್ಲಿ ಸದ್ದಿಲ್ಲದೆ ಮಹತ್ವದ ಬೆಳವಣಿಗೆ ನಡೆದಿದೆ. ಸಿಎಂ ಸಿದ್ದರಾಮಯ್ಯ ಅವರನ್ನು ಸೈಡ್ ಲೈನ್ ಮಾಡಲಾಗುತ್ತಿದೆಯೇ ಎನ್ನುವ ಚರ್ಚೆ ಶುರುವಾಗಿದೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತ ಚರ್ಚೆ ಹೆಚ್ಚಾಗುತ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ ಅವರನ್ನು ಸೈಡ್ ಲೈನ್ ಮಾಡಿ ಡಿಕೆಶಿಯನ್ನು ಮುನ್ನೆಲೆಗೆ ತರಲಾಗುತ್ತಿದೆ. ಇದಕ್ಕಾಗಿಯೇ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಡಿಕೆಶಿಗೆ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ನೀಡಲಾಗಿದೆ.
ಇತ್ತೀಚೆಗಷ್ಟೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್ಲರೂ ಬಾಯಿ ಮುಚ್ಚಿಕೊಂಡು ಇರಬೇಕು. ಯಾವಾಗ ಏನು ಮಾಡಬೇಕು ಎನ್ನುವುದು ಹೈಕಮಾಂಡ್ ಗೆ ಗೊತ್ತಿದೆ ಎಂದು ಖಡಕ್ ವಾರ್ನಿಂಗ್ ಮಾಡಿದ್ದರು. ಇದಾದ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಬಹಿರಂಗ ಚರ್ಚೆಗೆ ಬ್ರೇಕ್ ಬಿದ್ದಿದೆ.
ಆದರೆ, ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ್ದು, ಅದರಲ್ಲಿ ಸಿದ್ದರಾಮಯ್ಯನವರ ಹೆಸರೇ ಇಲ್ಲ. ಡಿಕೆಶಿಗೆ ಸ್ಥಾನ ನೀಡಿದ್ದು, ಇದು ಸಿದ್ದರಾಮಯ್ಯನವರಿಗೆ ಗೇಟ್ ಪಾಸ್ ನೀಡಿದಂತಿದೆ. ಇದನ್ನೆಲ್ಲಾ ಗಮನಿಸಿದರೆ ಅವರ ರಾಜಕೀಯ ನಿವೃತ್ತಿ ಸಮೀಪಿಸಿದಂತಿದೆ ಎಂದೆಲ್ಲಾ ರಾಜಕೀಯ ವಲಯದಲ್ಲಿ ಚರ್ಚೆಯಾಗ್ತಿದೆ.