ಉಡುಪಿ: ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(PDO) ಹಾಗೂ ದ್ವಿತೀಯ ದರ್ಜೆ ಸಹಾಯಕ(SDA) ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಜಾಗದ ದಾಖಲೆಗೆ 9/11 ಮಾಡಿಕೊಡಲು 22 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟು ಅದನ್ನು ಪಡೆಯುತ್ತಿದ್ದ ವೇಳೆಯಲ್ಲಿ ಗಂಗೊಳ್ಳಿ ಪಿಡಿಒ ಉಮಾಶಂಕರ್, ಎಸ್ಡಿಎ ಶೇಖರ್ ಜಿ. ಅವರನ್ನು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.
ಮೊಹಮ್ಮದ್ ಹನೀಫ್ ಎಂಬುವರು ಜಾಗದ ದಾಖಲೆಗಾಗಿ ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸಿದ್ದು, ಪಿಡಿಒ ಮತ್ತು ಎಸ್ಡಿಎ 22 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಕುರಿತಾಗಿ ಹನೀಫ್ ಅವರು ಉಡುಪಿ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಬುಧವಾರ ಲಂಚ ಪಡೆಯುತ್ತಿದ್ದ ವೇಳೆಯಲ್ಲೇ ಲೋಕಾಯುಕ್ತ ಪ್ರಭಾರ ಡಿವೈಎಸ್ಪಿ ಮಂಜುನಾಥ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.