ಬೆಂಗಳೂರು: ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಬಾಂಗ್ಲಾದೇಶದ ಮೂಲದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ದುಷ್ಕರ್ಮಿಗಳು ಉಸಿರುಗಟ್ಟಿಸಿ ಕಲ್ಲಿನಿಂದ ಮುಖ ಜಜ್ಜಿ ಭೀಕರವಾಗಿ ಕೊಲೆ ಮಾಡಿದ ಘಟನೆ ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೊತ್ತನೂರಿನ ಕೃಷ್ಣಪ್ಪ ಲೇಔಟ್ ನಿವಾಸಿ 28 ವರ್ಷದ ಮಹಿಳೆ ಕೊಲೆಯಾಗಿದ್ದಾರೆ. ಗುರುವಾರ ರಾತ್ರಿ ಘಟನೆ ನಡೆದಿದ್ದು, ಶುಕ್ರವಾರ ದಾರಿಹೋಕರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಬಾಂಗ್ಲಾದೇಶ ಮೂಲದ ದಂಪತಿ ಮೂವರು ಮಕ್ಕಳೊಂದಿಗೆ ಬೆಂಗಳೂರಿನಲ್ಲಿ ನಡೆಸಿದ್ದಾರೆ. ಪತಿ ಬಿಬಿಎಂಪಿ ಕಸದ ಯಾರ್ಡ್ ನಲ್ಲಿ ಕಸ ಬೇರ್ಪಡಿಸುವ ಕೆಲಸ ಮಾಡುತ್ತಿದ್ದು, ಪತ್ನಿ ಕಲ್ಕೆರೆ ಡಿಎಸ್ಆರ್ ಅಪಾರ್ಟ್ಮೆಂಟ್ ನಲ್ಲಿ ಮನೆ ಕೆಲಸ ಮಾಡುತ್ತಿದ್ದರು.
ಗುರುವಾರ ಕೆಲಸ ಮುಗಿಸಿ ಮನೆಗೆ ತೆರಳುವಾಗ ದುಷ್ಕರ್ಮಿಗಳ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ರಾತ್ರಿಯಾದರೂ ಪತ್ನಿ ಮನೆಗೆ ಬಾರದ ಕಾರಣ ಪತಿ ಕರೆ ಮಾಡಿ ಹುಡುಕಾಡಿದ್ದಾರೆ. ಆದರೆ, ಮಾಹಿತಿ ಗೊತ್ತಾಗಿಲ್ಲ. ಬಳಿಕ ಪೊಲೀಸರಿಗೆ ದೂರು ನೀಡಿದ್ದು, ಶುಕ್ರವಾರ ಬೆಳಗ್ಗೆ ಪೊಲೀಸರಿಗೆ ಮಾಹಿತಿ ಬಂದಾಗ ವಿಷಯ ಗೊತ್ತಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.