ಬೆಂಗಳೂರು : ವಿಧಾನಸೌಧದ ಆವರಣದಲ್ಲಿ ಸ್ಥಾಪಿಸಲಾಗಿರುವ 25 ಅಡಿ ಎತ್ತರದ ಭುವನೇಶ್ವರಿ ಕಂಚಿನ ಪ್ರತಿಮೆಯನ್ನು ಜನವರಿ 27 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾವರಣಗೊಳಿಸಲಿದ್ದಾರೆ.
ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡʼ ಎಂಬ ಶೀರ್ಷಿಕೆಯಡಿ ವರ್ಷವಿಡೀ ರಾಜ್ಯಾದ್ಯಂತ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಅದರಂತೆ ಭುವನೇಶ್ವರಿ ಪ್ರತಿಮೆಯನ್ನು ವಿಧಾನಸೌಧದ ಆವರಣದಲ್ಲಿ ಪ್ರತಿಷ್ಠಾಪಿಸಲು ನಿರ್ಧರಿಸಲಾಗಿತ್ತು. ಪ್ರತಿಮೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಜನವರಿ 27ರಂದು ಸಂಜೆ 4.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾವರಣಗೊಳಿಸಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್ ತಂಗಡಗಿ ಅವರು ತಿಳಿಸಿದ್ದಾರೆ.