ಕಾರವಾರ: ಅಪ್ರಾಪ್ತೆಯನ್ನು ಪುಸಲಾಯಿಸಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದ ಕಾಮುಕನಿಗೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷಗಳ ಕಠಿನ ಜೈಲು ಶಿಕ್ಷೆ ವಿಧಿಸಿದೆ.
29 ವರ್ಷದ ವಿವಾಹಿತ ವ್ಯಕ್ತಿ 17 ವರ್ಷದ ಬಾಲಕಿಯೊಂದಿಗೆ ಸ್ನೇಹ ಬೆಳೆಸಿ ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿದ್ದ. ಅಲ್ಲದೇ ತನ್ನ ತಾಯಿ ಕರೆದಿದ್ದಾಳೆ ಎಂದು ಹೇಳಿ ಮನೆಗೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರವೆಸಗಿದ್ದ. 2022ರಲ್ಲಿ ಅಂಕೋಲಾದಲ್ಲಿ ಈ ಘಟನೆ ನಡೆದಿತ್ತು. ವಿಷಯ ಬಾಯ್ಬಿಟ್ಟರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ. ಸಂತ್ರಸ್ತ ಬಾಲಕಿ ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು.
ಆರೋಪಿಯನ್ನು ಬಂಧಿಸಿದ್ದ ಪೊಲೀಸರು ಪೋಕ್ಸೋ ಕೇಸ್ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶೆ ಪ್ರತಿಭಾ ಕುಲಕರ್ಣಿ, ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1 ಲಕ್ಷ ರೂಪಾಯಿ ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ತಪ್ಪಿದಲ್ಲಿ ಹೆಚ್ಚುವರಿ 1 ವರ್ಷ ಜೈಲು ಶಿಕ್ಷೆಯಾಗಲಿದೆ ಎಂದು ತೀರ್ಪು ಪ್ರಕಟಿಸಿದ್ದಾರೆ.