ಬಳ್ಳಾರಿ : ರಾಜ್ಯದ ಎಲ್ಲಾ ಮಹಾನಗರ ಪಾಲಿಕೆ ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹದಲ್ಲಿ ಮಹತ್ವದ ಬದಲಾವಣೆಯಾಗಲಿದ್ದು, ಇದಕ್ಕಾಗಿ ಜಿಯೋ ಟ್ಯಾಗ್ ವ್ಯವಸ್ಥೆ ಬರಲಿದೆ. ಶೀಘ್ರದಲ್ಲಿ ರಾಜ್ಯದಾದ್ಯಂತ ಜಾರಿಗೊಳಿಸಲಾಗುವುದು ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು ಹೇಳಿದರು.
ಜಿಲ್ಲಾಡಳಿತ ವತಿಯಿಂದ ನಗರದ ಬಿಮ್ಸ್ ಮೈದಾನದ ಆವರಣದಲ್ಲಿ ಭಾನುವಾರ ಏರ್ಪಡಿಸಿದ್ದ 76ನೇ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ರಾಜ್ಯದ ಬಹುತೇಕ ಎಲ್ಲಾ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ನಿರ್ಮಾಣಗೊಂಡಿರುವ ಬಡಾವಣೆಗಳಲ್ಲಿ ಅಧಿಕೃತವಾಗಿ ಹಾಗೂ ಇನ್ನೂ ಕೆಲವು ಪರವಾನಿಗೆ ಪಡೆಯದೇ ಅನಧಿಕೃತವಾಗಿ ನಿರ್ಮಾಣಗೊಂಡಿರುವ ಎಲ್ಲಾ ಕಟ್ಟಡಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ. ಅದಕ್ಕೆ ಪೂರಕವಾಗಿ ಸ್ಥಳೀಯ ಸಂಸ್ಥೆಗಳಿಗೆ ಸಂದಾಯವಾಗಬೇಕಾದ ಭಾರೀ ಪ್ರಮಾಣದ ತೆರಿಗೆ ವಸೂಲಾಗದೇ ಬಾಕಿ ಉಳಿಯುತ್ತಿರುವುದನ್ನು ಸರ್ಕಾರವು ವಸೂಲಿಗೆ ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದರು.
ಹಾಗಾಗಿ ಸ್ಥಳೀಯ ಸಂಸ್ಥೆಗಳಿಗೆ ನಿಯಮಾನುಸಾರವಾಗಿ ಸಾರ್ವಜನಿಕರಿಂದ ಪಾವತಿಯಾಗಬೇಕಾದ ತೆರಿಗೆ ವಸೂಲಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಬಿಬಿಎಂಪಿ ಮಾದರಿಯಲ್ಲಿ ಎಲ್ಲಾ ಆಸ್ತಿಗಳನ್ನು ಎ ಮತ್ತು ಬಿ ಖಾತಾಗಳನ್ನಾಗಿ ವಿಂಗಡಿಸಿ, ರಾಜ್ಯದಾದ್ಯಂತ ಏಕರೀತಿಯ ಕರವಸೂಲಾತಿಗೆ ಜಿಯೋ ಟ್ಯಾಗ್ ವ್ಯವಸ್ಥೆ ಜಾರಿಗೊಳಿಸಲಾಗುವುದು ಎಂದು ಸಚಿವರು ಹೇಳಿದರು.
ಈ ಸಂದರ್ಭದಲ್ಲಿ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯುಲು, ಪಾಲಿಕೆಯ ಉಪಮೇಯರ್ ಡಿ.ಸುಕುಂ, ಬಳ್ಳಾರಿ ವಲಯ ಪೊಲೀಸ್ ಮಹಾನೀರಿಕ್ಷಕರಾದ ಬಿ.ಎಸ್.ಲೋಕೇಶ್ ಕುಮಾರ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಸೇರಿದಂತೆ ಇತರರು ಇದ್ದರು.
ಬಳಿಕ ಸಚಿವರು, ಬಿಮ್ಸ್ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್ ಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಪರಿಶೀಲಿಸಿದರು. ಸ್ವಚ್ಛತಾ ನಿರ್ವಹಣೆ ಕೈಗೊಳ್ಳಬೇಕು. ಮೆನು ಪ್ರಕಾರವೇ ಆಹಾರ ನೀಡಬೇಕು ಎಂದು ವ್ಯವಸ್ಥಾಪಕರಿಗೆ ಸೂಚಿಸಿದರು.