ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕುಟುಂಬದವರು ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿ ವ್ಯಾಪ್ತಿಯಲ್ಲಿ ಸರ್ಕಾರದ ಜಮೀನು ಒತ್ತುವರಿ ಮಾಡಿರುವ ಆರೋಪದ ಕುರಿತಂತೆ ಹೈಕೋರ್ಟ್ ಸೂಚನೆಯಂತೆ ತನಿಖೆ ನಡೆಸಲು ಉನ್ನತ ಅಧಿಕಾರಿಗಳ ತಂಡ ರಚಿಸಿರುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖೆ ನಡೆಸಿ ವರದಿ ನೀಡಲು ಮೂರು ತಿಂಗಳ ಕಾಲಾವಕಾಶ ನೀಡುವಂತೆ ಕೋರಲಾಗಿತ್ತು. ಆದರೆ, ನ್ಯಾಯಾಲಯ ಸಮಯ ಕೊಡಲಿಲ್ಲ. ಹೀಗಾಗಿ ತನಿಖೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ಫೆಬ್ರವರಿ 21ರೊಳಗೆ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.
ಹೆಚ್.ಡಿ. ಕುಮಾರಸ್ವಾಮಿ ಮತ್ತು ಅವರ ಸಂಬಂಧಿ ಡಿ.ಸಿ. ತಮ್ಮಣ್ಣ ಇತರರು ಕೇತಗಾನಹಳ್ಳಿ ವ್ಯಾಪ್ತಿಯಲ್ಲಿ 14 ಎಕರೆ ಸರ್ಕಾರಿ ಜಮೀನು ಒತ್ತುವರಿ ಮಾಡಿದ ಆರೋಪದ ಮೇಲೆ ಎಸ್.ಆರ್. ಹಿರೇಮಠ ನೇತೃತ್ವದ ಸಮಾಜ ಪರಿವರ್ತನಾ ಸಮುದಾಯ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದು, ನ್ಯಾಯಮೂರ್ತಿ ಕೆ. ಸೋಮಶೇಖರ್ ನೇತೃತ್ವದ ವಿಭಾಗೀಯ ಪೀಠದಲ್ಲಿ ಬುಧವಾರ ವಿಚಾರಣೆ ನಡೆಸಲಾಗಿತ್ತು.
ಭೂ ಒತ್ತುವರಿ ತೆರವಿಗೆ ಕ್ರಮ ವಹಿಸುವಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ ಅವರನ್ನು ನ್ಯಾಯಪೀಠ ತರಾಟೆಗೆ ತೆಗೆದುಕೊಂಡಿತ್ತು. ಕುಮಾರಸ್ವಾಮಿ ಉನ್ನತ ಹುದ್ದೆಯಲ್ಲಿದ್ದಾರೆ ಎಂದು ನೀವು ಕ್ರಮ ಕೈಗೊಳ್ಳುತ್ತಿಲ್ಲ. ನಿಮ್ಮನ್ನು 15 ದಿನ ಜೈಲಿಗೆ ಕಳಿಸಿದರೆ ಎಲ್ಲವೂ ಸರಿ ಹೋಗುತ್ತದೆ ಎಂದು ನ್ಯಾಯಪೀಠ ಎಚ್ಚರಿಕೆ ನೀಡಿತ್ತು.