ನವದೆಹಲಿ: ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಕಲಹ, ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ಬಣ ಬಡಿದಾಟ ದೆಹಲಿ ಅಂಗಳ ತಲುಪಿದ್ದು, ಶಾಸಕ ಯತ್ನಾಳ್ ಬಣ ಹಾಗೂ ಬಿ.ವೈ.ವಿಜಯೇಂದ್ರ ಬಣ ದೆಹಲಿಯಲ್ಲಿ ಬೀಡು ಬಿಟ್ಟಿದೆ.
ಯತ್ನಾಳ್ ಬಣದ ರಮೇಶ್ ಜಾರಕಿಹೊಳಿ, ಜಿ.ಎಂ.ಸಿದ್ದೇಶ್ವರ್, ಕುಮಾರ್ ಬಂಗಾರಪ್ಪ, ಯತ್ನಾಳ್ ಸೇರಿದಂತೆ ಹಲವು ನಾಯಕರು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಭೇಟಿಯಾಗಿ ರಾಜ್ಯದಲ್ಲಿನ ಬಿಜೆಪಿ ಬೆಳವಣಿಗೆ, ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರವಾಗಿ ಚರ್ಚೆ ನಡೆಸಿದ್ದರು. ಬಿ.ಎಲ್ ಸಂತೋಷ್ ಅವರನ್ನು ಭೇಟಿಯಾಗಿ ಮಾತುಮತೆ ನಡೆಸಿದ್ದರು. ಇಂದು ಸಂಸದ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಕುತೂಹಲ ಮೂಡಿಸಿದ್ದಾರೆ.
ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕೂಡ ದೆಹಲಿ ಪ್ರವಾಸದಲ್ಲಿದ್ದು, ವರಿಷ್ಠರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಮಹತ್ವದ ಸಮಾಲೋಚನೆ ನಡೆಸಿದ್ದಾರೆ.
ಈ ಬೆಳವಣಿಗೆ ಬೆನ್ನಲ್ಲೇ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ರಮೇಶ್ ಜಾರಕಿಹೊಳಿ, ಶೀಘ್ರದಲ್ಲೇ ಒಳ್ಳೆಯ ಸುದ್ದಿ ಸಿಗಲಿದೆ. ಫೆ.10ರಂದು ಶುಭ ಸುದ್ದಿ ಸಿಗಲಿದೆ ಎಂದು ತಿಳಿಸಿದ್ದಾರೆ.