ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಬದಲಾವಣೆ ಮಾಡಬೇಕು ಎಂದು ಪಟ್ಟು ಹಿಡಿದಿರುವ ಶಾಸಕ ಯತ್ನಾಳ್ ಬಣಕ್ಕೆ ವಿಜಯೇಂದ್ರ ಬಣದ ಸದಸ್ಯರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಭಿನ್ನಮತೀಯ ಚಟುವಟಿಕೆಯಲ್ಲಿ ತೊಡಗಿರುವವರನ್ನು ಪಕ್ಷದಿಂದಲೇ ಉಚ್ಛಾಟನೆ ಮಾಡಬೇಕು ಎಂದು ವರಿಷ್ಠರಿಗೆ ಆಗ್ರಹಿಸಿದ್ದಾರೆ.
ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ನೇತೃತ್ವದಲ್ಲಿ ಕಟ್ಟಾಸುಬ್ರಹ್ಮಣ್ಯ ನಾಯ್ಡು ನಿವಾಸದಕ್ಲಿ ನಡೆದ ವಿಜಯೇಂದ್ರ ಬಣದ ಸದಸ್ಯರ ಸಭೆಯಲ್ಲಿ ವಿಜಯೇಂದ್ರ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಸಿಡಿದೆದ್ದಿರುವ ಯತ್ನಾಳ್ ಹಾಗೂ ಟೀಂ ಸದಸ್ಯರನ್ನು ಪಕ್ಷದಿಂದ ಉಚ್ಛಾಟಿಸುವ ಕ್ರಮ ಕೈಗೊಳ್ಳಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಭಿನ್ನಮತೀಯ ನಾಯಕರು ಮಾನಸಿಕವಾಗಿ ಕುಗ್ಗಿಸುವ ಯತ್ನ ನಡೆಸುತ್ತಿದ್ದಾರೆ. ಪಕ್ಷದ ಒಗ್ಗಟ್ಟಿಗೆ ಹಾಗೂ ಸಂಘಟನೆಗೆ ಇದು ದಕ್ಕೆಯುಂತಾಗುತ್ತಿದೆ. ಅಂತಹ ಸದಸ್ಯರನ್ನು ಪಕ್ಷದಿಂದ ಉಚ್ಛಾಟನೆ ಮಾಡದೇ ಬೇರೆ ಮಾರ್ಗವಿಲ್ಲ. ಈ ನಿಟ್ಟಿನಲ್ಲಿ ವಿಜಯೇಂದ್ರ ನೇತ್ರತ್ವದಲ್ಲಿ ಬೃಹತ್ ಸಭೆ ನಡೆಸಿ ನಿರ್ಧಾರ ಕೈಗೊಳ್ಳಬೇಕು. ಈ ಬಗ್ಗೆ ವರಿಷ್ಠರ ಗಮನಕ್ಕೆ ತರಬೇಕು ಎಂದು ವಿಜಯೇಂದ್ರ ಬಣದ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.