
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಯಲ್ಲಿ ಸರ್ಕಾರದ ಪಾತ್ರವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತೊಮ್ಮೆ ಪುನರುಚ್ಛರಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮೆಟ್ರೋ ಪ್ರಯಾಣ ದರ ಇಳಿಸುವಂತೆ ಜನರು ಮನವಿ ಮಾಡುತ್ತಿದ್ದಾರೆ. ಜನರ ಬಯಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ದರ ಇಳಿಕೆ ಬಗ್ಗೆ ಬಿ.ಎಂ.ಆರ್.ಸಿ.ಎಲ್ ಯಾವ ತೀರ್ಮಾನ ಕೈಗೊಳ್ಳುತ್ತೋ ಕೈಗೊಳ್ಳಲಿ ಎಂದರು.
ಮೆಟ್ರೋ ಪ್ರಯಾಣ ಹೆಚ್ಚಳ ಮಾಡಿರುವುದರಲ್ಲಿ ಸರ್ಕಾರದ ಪಾತ್ರವಿಲ್ಲ. ಅದಕ್ಕೆ ಪ್ರತ್ಯೇಕವಾದ ಕಮಿಟಿ ಇರುತ್ತದೆ. ಅವರೇ ತೀರ್ಮಾನ ಮಾಡುತ್ತಾರೆ. ನಾವು ನಮ್ಮ ಅಭಿಪ್ರಾಯವನ್ನು ತಿಳಿಸಬಹುದಷ್ಟೇ, ಈಗ ನಮ್ಮ ಅಭಿಪ್ರಾಯ, ಜನರ ಅಭಿಪ್ರಾಯವನ್ನು ತಿಳಿಸಿದ್ದೇವೆ. ಬಿಎಂಆರ್ ಸಿ ಎಲ್ ಯಾವ ನಿರ್ಧಾರ ಕೈಗೊಳ್ಳುತ್ತದೆಯೋ ಕೈಗೊಳ್ಳಲಿ ಎಂದು ಹೇಳಿದರು.