
ಬೆಂಗಳೂರು: ರಾಜ್ಯದಲ್ಲಿ ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ -1 ನಡೆಯಲಿದ್ದು, 8,96,447 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಇದು ದಾಖಲೆಯಾಗಿದೆ ಎಂದು ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದ್ದಾರೆ.
ಸಮಗ್ರ ಶಿಕ್ಷಣ ಕರ್ನಾಟಕ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ಪೂರ್ವ ಸಿದ್ಧತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆಗೆ ಈ ಹಿಂದೆ 2021 ರಲ್ಲಿ 8.76 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿದ್ದು ಅತಿ ಹೆಚ್ಚಿನ ಸಂಖ್ಯೆಯಾಗಿತ್ತು. ಈ ಬಾರಿ 8.96 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ 8.42 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನಿತ್ಯ ತರಗತಿಗೆ ಹಾಜರಾದ ವಿದ್ಯಾರ್ಥಿಗಳಾಗಿದ್ದಾರೆ. 38,091 ಪುನರಾವರ್ತಿತ ವಿದ್ಯಾರ್ಥಿಗಳು, 15,529 ಖಾಸಗಿ ವಿದ್ಯಾರ್ಥಿಗಳು ಇದ್ದಾರೆ.
ಒಟ್ಟು 2818 ಕೇಂದ್ರಗಳಲ್ಲಿ ಈ ಬಾರಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆ ಅಕ್ರಮ ತಡೆಗೆ ವೆಬ್ ಕಾಸ್ಟಿಂಗ್ ಜೊತೆಗೆ 2818 ಸ್ಥಾನಿಕ ಜಾಗೃತ ದಳ, ಜಿಲ್ಲಾ ಹಂತದಲ್ಲಿ 410 ಮತ್ತು ತಾಲೂಕು ಹಂತದಲ್ಲಿ 1662 ವಿಚಕ್ಣ ಜಾಗೃತ ದಳಗಳು ಕಾರ್ಯನಿರ್ವಹಿಸುತ್ತವೆ ಎಂದು ಹೇಳಿದ್ದಾರೆ.