
ಚಿತ್ರದುರ್ಗ: ರಾಜ್ಯದ ರೈತರಿಗೆ ನಿರಂತರ ವಿದ್ಯುತ್ ಪೂರೈಕೆಗೆ ರಾಜ್ಯ ಸರ್ಕಾರ ಸಂಕಲ್ಪ ಮಾಡಿದೆ ಎಂದು ಯೋಜನಾ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ ಹೇಳಿದರು.
ಇಂಧನ ಇಲಾಖೆ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ವತಿಯಿಂದ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಳಲ್ಕೆರೆ ತಾಲ್ಲೂಕು ಅರಸನಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ 66/11 ಕೆ.ವಿ ವಿದ್ಯುತ್ ಉಪಕೇಂದ್ರವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮ ಸರ್ಕಾರ 2023ರ ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಪೂರೈಸಿರುವುದರ ಜೊತೆಗೆ ರಾಜ್ಯ ರೈತರಿಗೆ ನಿರಂತರ ವಿದ್ಯುತ್ ಪೂರೈಕೆಗೆ ಸಂಕಲ್ಪ ಮಾಡಿದೆ. ರಾಜ್ಯದಲ್ಲಿ ಎಲ್ಲಿಯೂ ಲೋಡ್ ಶೆಡ್ಡಿಂಗ್ ಇಲ್ಲ. ಓವರ್ ಲೋಡ್ ಆಗಿರುವ ಕಡೆ ಹೊಸ ವಿದ್ಯುತ್ ಉಪಕೇಂದ್ರಗಳ ಸ್ಥಾಪನೆ ಮಾಡುವ ಮೂಲಕ ಹೆಚ್ಚಿನ ಶಕ್ತಿ ತುಂಬವ ಕೆಲಸ ಮಾಡಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ನಿರಂತರವಾಗಿ 7 ಗಂಟೆ ವಿದ್ಯುತ್ ಪೂರೈಕೆಮಾಡಲಾಗುತ್ತಿದ್ದು, ಅಡಚಣೆ ಇರುವ ಕಡೆ 5ರಿಂದ 6 ಗಂಟೆಗಳ ಕಾಲ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಅರಸನಘಟ್ಟ ವಿದ್ಯುತ್ ಉಪಕೇಂದ್ರ ಪ್ರಾರಂಭದಿಂದಾಗಿ ಅರಸನಘಟ್ಟ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳಿಗೆ ಗುಣಮಟ್ಟದ ನಿರಂತರ ವಿದ್ಯುತ್ ಸರಬರಾಜು ಆಗಲಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ 25 ವಿದ್ಯುತ್ ಉಪಕೇಂದ್ರಗಳ ನಿರ್ಮಾಣಕ್ಕೆ ಗುದ್ದಲಿಪೂಜೆ: ಜಿಲ್ಲೆಯಲ್ಲಿ ಸಂಪೂರ್ಣವಾಗಿ ವಿದ್ಯುತ್ ಕೊರತೆ ನೀಗಿಸುವ ನಿಟ್ಟಿನಲ್ಲಿ ಪ್ರಸಕ್ತ ವರ್ಷವೇ ಜಿಲ್ಲೆಗೆ ಅವಶ್ಯ ಇರುವ 25 ವಿದ್ಯುತ್ ಉಪಕೇಂದ್ರಗಳ ನಿರ್ಮಾಣಕ್ಕೆ ಗುದ್ದಲಿಪೂಜೆ ಮಾಡಿ, ಮುಂದಿನ ಒಂದು ವರ್ಷದೊಳಗೆ ಲೋಕಾರ್ಪಣೆಗೊಳಿಸಲಾಗುವುದು ಎಂದು ಡಿ.ಸುಧಾಕರ್ ಭರವಸೆ ನೀಡಿದರು.
ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ ಮಾತನಾಡಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಚಿತ್ರದುರ್ಗ ಕಾರ್ಯನಿರ್ವಾಹಕ ಇಂಜಿನಿಯರ್ ಬಿ.ಮಲ್ಲಿಕಾರ್ಜುನ ಸ್ವಾಮಿ, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಆರ್.ರಮೇಶ್, ಬೆಸ್ಕಾಂ ಕಾರ್ಯಪಾಲಕ ಇಂಜಿನಿಯರ್ ತಿಮ್ಮರಾಯಪ್ಪ, ವಿದ್ಯುತ್ ಉಪಕೇಂದ್ರದ ಗುತ್ತಿಗೆದಾರರಾದ ರಾಮಕೃಷ್ಣ, ರವಿ, ಗ್ರಾಮ ಪಂಚಾಯಿತಿ ಸದಸ್ಯರಾದ ತಿಮ್ಮಣ್ಣ, ತಿಪ್ಪಣ್ಣ, ಅಜ್ಜಪ್ಪ, ಹರೀಶ್, ಓಂಕಾರಮೂರ್ತಿ, ದಯಾನಂದ ಇತರರು ಇದ್ದರು.