
ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಧಗೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಮುಂದಿನ ಐದು ದಿನ ಕೆಲವು ಕಡೆ ಉಷ್ಣಾಂಶದಲ್ಲಿ ನಾಲ್ಕರಿಂದ ಐದು ಡಿಗ್ರಿ ಸೆಲ್ಸಿಯಸ್ ವರೆಗೆ ಹೆಚ್ಚಳವಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಅನೇಕ ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ನಷ್ಟು ಅಧಿಕ ಉಷ್ಣಾಂಶ ದಾಖಲಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಪ್ರತಿದಿನ ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್ ದಾಟುತ್ತಿದೆ. ಮುಂದಿನ ಐದು ದಿನ ಇದು ಏರುಗತಿ ಪಡೆಯುವ ಸಾಧ್ಯತೆಯಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನ ಭಾಗದಲ್ಲಿ ಸಾಮಾನ್ಯಕ್ಕಿಂತ ಐದು ಡಿಗ್ರಿ ಸೆಲ್ಸಿಯಸ್ ವರೆಗೆ ಉಷ್ಣಾಂಶ ಹೆಚ್ಚಳವಾಗಬಹುದು. ದಕ್ಷಿಣ ಒಳನಾಡಿನಲ್ಲಿ ಎರಡು ಡಿಗ್ರಿ ಸೆಲ್ಸಿಯಸ್ ವರೆಗೆ ಉಷ್ಣಾಂಶ ಏರಿಕೆಯಾಗುವ ಸಾಧ್ಯತೆ ಇದೆ.
ಕರಾವಳಿಯ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯ ಕೆಲವು ಕಡೆ ಸೋಮವಾರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಅಂಕೋಲಾದ ಬೇಲೇಕೇರಿ ಕುಮಟಾದ ಹಂದಿಗೋಣ ಸೇವೆಗಳ ಸಾಧಾರಣ ಮಳೆಯಾಗಿದೆ.